ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.  
ಮಂಡ್ಯ

ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಮಂಡ್ಯ: ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಹುಂಡಿಗಳಲ್ಲಿರುವ ನಗದು, ಚಿನ್ನ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇವಾಲಯಗಳ ಹುಂಡಿಗಳನ್ನು ನಿಗದಿತ ವೇಳಾಪಟ್ಟಿಯಂತೆ ತೆರೆಯಬೇಕು ಹಾಗೂ ಎಣಿಕೆ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಮತ್ತು ಸಮಿತಿ ಸದಸ್ಯರ ಸಮ್ಮುಖದಲ್ಲಿ ಪಾರದರ್ಶಕವಾಗಿ ನಡೆಸಬೇಕು. ನಗದು ಹಣ, ಚಿನ್ನ, ಬೆಳ್ಳಿ ಹಾಗೂ ಇತರೆ ಅಮೂಲ್ಯ ವಸ್ತುಗಳ ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಅವುಗಳನ್ನು ಸುರಕ್ಷಿತವಾಗಿ ಭದ್ರಪಡಿಸಬೇಕು ಎಂದು ಅವರು ತಿಳಿಸಿದರು.
ಹುಂಡಿ ಎಣಿಕೆ ಪ್ರಕ್ರಿಯೆಯ ಸಂಪೂರ್ಣ ವಿವರ ದಾಖಲಿಸಿ, ಆದಾಯ-ವೆಚ್ಚದ ಲೆಕ್ಕಪತ್ರಗಳನ್ನು ನಿಯಮಾನುಸಾರ ನಿರ್ವಹಿಸುವ ಮೂಲಕ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಬೇಕು. ಅಗತ್ಯವಿರುವ ಕಡೆ ಸಿ.ಸಿ ಕ್ಯಾಮೆರಾ ನಿಗಾ ವ್ಯವಸ್ಥೆ, ಪೊಲೀಸ್ ಭದ್ರತಾ ಸಿಬ್ಬಂದಿ ಹಾಗೂ ಸುರಕ್ಷಿತ ಸಂಗ್ರಹ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಸರ್ಕಾರದ ನೀಡಿರುವ ಮಾರ್ಗಸೂಚಿಗಳ ಕಟ್ಟು ನಿಟ್ಟಿನ ಪಾಲನೆಯಿಂದ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜತೆಗೆ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮುಜರಾಯಿ ದೇವಸ್ಧಾನದಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಮುಜರಾಯಿ ತಹಸೀಲ್ದಾರ್ ತಮ್ಮಣ್ಣಗೌಡ ಇತರರಿದ್ದರು.