ನಾಗಮಂಗಲ ಪಟ್ಟಣದ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದ ಪೂರ್ವಭಾವಿ ಸಭೆ ತಹಸೀಲ್ದಾರ್ ಆದರ್ಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಾಗಮಂಗಲ: ತಾಲೂಕು ಆಡಳಿತಸೌಧದ ಆವರಣದಲ್ಲಿ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಜಿ.ಆದರ್ಶ ತಿಳಿಸಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಿಂದ ತೆರೆದ ವಾಹನದಲ್ಲಿ ಸರ್ವಾಲಂಕೃತ ನಾಡಪ್ರಭು ಕೆಂಪೇಗೌಡ ಭಾವಚಿತ್ರವನ್ನು ಮಂಗಳವಾದ್ಯ, ಜಾನಪದ ಕಲಾತಂಡಗಳ ಕಲಾ ಪ್ರದರ್ಶನ ಹಾಗೂ ಪೂರ್ಣಕುಂಭದೊಂದಿಗೆ ಮೆರವಣಿಗೆ ನಡೆಸಲಾಗುವುದು ಎಂದರು.
ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಕೃಷಿ, ಜಾನಪದ, ಆರೋಗ್ಯ, ಶಿಕ್ಷಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪ್ರಮುಖರನ್ನು ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ನೌಕರ ವರ್ಗ ಸೇರಿದಂತೆ ನಾಗರಿಕ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಮಂಜುನಾಥ್, ಗ್ರೇಡ್-2 ತಹಸೀಲ್ದಾರ್ ಮಂಜುನಾಥ್ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕೃಷ್ಣಮೂರ್ತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಜರಿದ್ದರು.