ಮಂಡ್ಯ ನಗರದ ಪೊಲೀಸ್ ಕಾಲನಿಯ ಸರ್ಕಾರಿ ಮಾದರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಆಲ್ಬೆಂಡಜೋಲ್ ಮಾತ್ರೆಯನ್ನು ಜಿಲ್ಲಾಧಿಕಾರಿ ಡಾ.ಕುಮಾರ ವಿತರಿಸಿದರು.  
ಮಂಡ್ಯ

ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಲಿ: ಜಿಲ್ಲಾಧಿಕಾರಿ ಡಾ.ಕುಮಾರ ಕಿವಿಮಾತು

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಆಲ್ಬೆಂಡಜೋಲ್ ಮಾತ್ರೆ ವಿತರಣೆ
  • ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ

ಮಂಡ್ಯ:

ಮಕ್ಕಳು ಸ್ವಚ್ಛತೆ ಹಾಗೂ ವೈಯಕ್ತಿಕ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅಂತೆಯೇ ಯುವಜನತೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಕಿವಿಮಾತು ಹೇಳಿದರು.

ನಗರದ ಪೊಲೀಸ್ ಕಾಲನಿಯ ಸರ್ಕಾರಿ ಮಾದರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಆಲ್ಬೆಂಡಜೋಲ್ ಮಾತ್ರೆ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಜಂತುಹುಳು ನಿವಾರಣಾ ಮಾತ್ರೆ ವಿತರಿಸಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ ಸುಮಾರು 3.52 ಲಕ್ಷ ಮಕ್ಕಳಿಗೆ ವಿತರಿಸಲಾಗುತ್ತಿದೆ ಎಂದರು.
ಶಾಲೆಗಳಲ್ಲಿಯೇ ಮಕ್ಕಳಿಗೆ ಮಾತ್ರೆಗಳನ್ನು ಆರೋಗ್ಯ ಸಿಬ್ಬಂದಿ ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಸೇವಿಸುವಂತೆ ಕ್ರಮ ವಹಿಸಬೇಕು. ಮಕ್ಕಳು ಆರೋಗ್ಯವಾಗಿದ್ದರೆ ಮಾತ್ರ ಉತ್ತಮವಾಗಿ ವಿದ್ಯಾಭ್ಯಾಸ ಮಾಡಲು ಸಾಧ್ಯ. ಆದ್ದರಿಂದ ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.
ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜತೆಗೆ ಊಟ ಮಾಡುವ ಮೊದಲು ಮತ್ತು ನಂತರ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪೌಷ್ಟಿಕ ಆಹಾರದ ಕೊರತೆ ಸೇರಿದಂತೆ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಂತುಹುಳು ನಿವಾರಣಾ ಮಾತ್ರೆ ವಿತರಿಸಲಾಗುತ್ತಿದೆ. ಜಿಲ್ಲೆಯ ಯಾವುದೇ ಮಗು ಮಾತ್ರೆ ಸೇವನೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಹಾಗೂ ಶಿಕ್ಷಕರು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ ಮಾತನಾಡಿ, ಮಕ್ಕಳಲ್ಲಿ ಜಂತುಹುಳು ಸೋಂಕು ನಿವಾರಿಸಿ ಅವರ ಆರೋಗ್ಯ ಹಾಗೂ ಪೌಷ್ಟಿಕತೆ ಹೆಚ್ಚಿಸುವ ಉದ್ದೇಶದಿಂದ ಪ್ರತಿವರ್ಷ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾದ್ಯಂತ ಸುಮಾರು 3.52 ಲಕ್ಷ ಮಕ್ಕಳಿಗೆ ಮಾತ್ರೆ ವಿತರಿಸಲಾಗುತ್ತಿದೆ. 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಈ ಮಾತ್ರೆಯನ್ನು ನೀಡಲಾಗುತ್ತದೆ. ಶಾಲೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧೆಡೆ ಮಕ್ಕಳಿಗೆ ಮಾತ್ರೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2 ವರ್ಷದಿಂದ 19 ವರ್ಷದೊಳಗಿನ ಮಕ್ಕಳಿಗೆ ಒಂದು ಮಾತ್ರೆಯನ್ನು ನೀಡಲಾಗುತ್ತದೆ. ಪ್ರತಿ ಆರು ತಿಂಗಳಿಗೊಮ್ಮೆ ಈ ಮಾತ್ರೆಯನ್ನು ಮಕ್ಕಳಿಗೆ ನೀಡುವ ಮೂಲಕ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಕ್ರಮವಹಿಸಲಾಗುತ್ತಿದೆ. ಜಂತುಹುಳು ನಿವಾರಣಾ ದಿನದಂದು ಮಾತ್ರೆ ಸೇವಿಸಲು ಸಾಧ್ಯವಾಗದ ಮಕ್ಕಳಿಗೆ ಆ.17ರಂದು ನಡೆಯುವ ಮಾಪ್-ಅಪ್ ದಿನದಂದು ಮಾತ್ರೆ ವಿತರಿಸಿ ಯಾವುದೇ ಮಗು ಈ ಕಾರ್ಯಕ್ರಮದಿಂದ ವಂಚಿತವಾಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಆಶಾಲತಾ, ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಟಿಎಚ್‌ಒ ಡಾ.ಜವರೇಗೌಡ, ಡಾ.ಆನಂದ್, ಡಾ.ಕುಮಾರ್, ವೇಣುಗೋಪಾಲ್ ಇತರರಿದ್ದರು.