ಮಂಡ್ಯ ನಗರದ ಎಸ್.ಬಿ. ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಉದ್ಘಾಟಿಸಿದರು.  
ಮಂಡ್ಯ

ತಂತ್ರಜ್ಞಾನ ನಾಗಲೋಟದಲ್ಲಿ ದಾಪುಗಾಲು: ಎಂಎಲ್‌ಸಿ ಮಧು ಜಿ.ಮಾದೇಗೌಡ ಹೇಳಿಕೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಶೈಕ್ಷಣಿಕ ಕಾರ್ಯಾಗಾರ
  • ಎಡಿಸಿ ಸೇರಿದಂತೆ ಹಲವು ಗಣ್ಯರು ಭಾಗಿ
ಮಂಡ್ಯ: ದಿನದಿಂದ ದಿನಕ್ಕೆ ತಂತ್ರಜ್ಞಾನ, ವೈಜ್ಞಾನಿಕ ಸಂಶೋಧನೆ ನಾಗಲೋಟದಲ್ಲಿ ದಾಪುಗಾಲು ಹಾಕುತ್ತಿದೆ. ಎಲ್ಲ ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆ(ಎಐ) ಬಳಕೆಯಾಗುತ್ತಿದೆ. ಇದು ಶಿಕ್ಷಣ ಕ್ಷೇತ್ರದಲ್ಲೂ ಬಳಕೆಯಾಗುತ್ತಿದೆ. ಆದ್ದರಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಕೂಡ ಅಪ್‌ಡೇಟ್ ಆಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಸಲಹೆ ನೀಡಿದರು.
ನಗರದ ಎಸ್.ಬಿ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ, ಪ್ರಾಂಶುಪಾಲರಿಗೆ ಡೈರಿ ಮತ್ತು ಬ್ಯಾಗ್ ವಿತರಣೆ, ರಾಷ್ಟ್ರೀಯ ಕ್ರೀಡಾಪಟು ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರು, ಪ್ರತಿಭಾನ್ವಿತ ಮತ್ತು ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ದೇಶದ ಪ್ರಗತಿ ಶಿಕ್ಷಣದಲ್ಲಿದೆ. ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಶ್ರಮದಿಂದ ಎಲ್ಲವೂ ಸಾಧ್ಯವಿದೆ. ಉಪನ್ಯಾಸಕರು ತಂತ್ರಜ್ಞಾನವನ್ನು ಕಲಿತು ಪಾಠ ಮಾಡಬೇಕಿದೆ. ಎಲ್ಲಿ ಸೋಲು ಕಾಣುತ್ತಿದೆಯೋ ಅಲ್ಲಿ ಎಐ ತಂತ್ರಜ್ಞಾನ ಬಳಕೆಗೆ ಸಾಧ್ಯತೆ ಹೆಚ್ಚಿದೆ ಎಂದು ಸಲಹೆ ನೀಡಿದರು.
ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ನಮಗೆ ತುಂಬ ಕಾಡುವುದು ನಾವು ಮಾತನಾಡುವಾಗ ನಮ್ಮ ಮನಸ್ಸುಗಳು ಸ್ವಚ್ಛಂದವಾಗಿಬೇಕು. ನಾನು ಎಷ್ಟೇ ಅದ್ಬುತ ಭಾಷಣ ಮಾಡಿದರೂ ಏನು ಪ್ರಯೋಜನ, ಮನಸ್ಸು ಏಕಾಗ್ರತೆಯಿಂದ ಕೇಳಿಸಿಕೊಳ್ಳಬೇಕು. ನಮ್ಮಲ್ಲಿ ಸರ್ಕಾರ ಬಹಳ ಮುಖ್ಯವಾಗಿ ನಡೆಸಬೇಕಿರುವ ಕ್ಷೇತ್ರಗಳು ಸಾಮಾಜಿಕ ಭದ್ರತೆ, ಶಿಕ್ಷಣ, ಆರೋಗ್ಯ ಕ್ಷೇತ್ರಗಳು.ನಮ್ಮದಿಯಾಗಿ ಜನರು ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪದವಿ ಪೂರ್ವ ಶಿಕ್ಷಣ ಕಾಲೇಜಿನ ಉಪನಿರ್ದೇಶಕ ಸಿ.ಚೆಲುವಯ್ಯ, ಎಸ್.ಬಿ. ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ನಾಗೇಶ್, ಉಪಾಧ್ಯಕ್ಷ ಎಂ.ಎಲ್.ಕೃಷ್ಣೇಗೌಡ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಯು.ಎಸ್.ನಟರಾಜ್, ಪ್ರಧಾನ ಕಾರ್ಯದರ್ಶಿ ಪಿ.ಕಾಂತರಾಜು ಇತರರಿದ್ದರು.