ಮಂಡ್ಯದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. 
ಮಂಡ್ಯ

ನೀರಿನ ಸಮಸ್ಯೆಯ ಪರಿಶೀಲನೆ ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ:

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಮತ್ತು ಪರಿಹರಿಸಲು ಸರ್ಕಾರದ ನಿರ್ದೇಶನದಂತೆ ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಕುಡಿಯುವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ರಚಿಸಲಾಗಿದೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಕಾಲಕಾಲಕ್ಕೆ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ವ್ಯವಸ್ಥೆ, ಪಶುಗಳಿಗೆ ಮೇವು ಹಾಗೂ ನೀರಿನ ಕೊರತೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಕುಡಿಯುವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ರಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಇದ್ದರೆ ಸ್ಧಳಕ್ಕೆ ಖುದ್ದಾಗಿ ಭೇಟಿ ನೀಡಿ ತಹಸೀಲ್ದಾರ್, ತಾಪಂ ಇಒ ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆ ಇಂಜಿನಿಯರ್ ಖುದ್ದಾಗಿ ಜಂಟಿಯಾಗಿ ಸಮೀಕ್ಷೆ ಮಾಡಿ ಕುಡಿಯುವ ನೀರು ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.
ಕೃಷಿ ಇಲಾಖೆಯ ಅಧಿಕಾರಿಗಳು ಜಮೀನಿಗೆ ನೇರವಾಗಿ ಭೇಟಿ ನೀಡಿ ಬೆಳೆ ಬಿತ್ತನೆ ಪ್ರದೇಶ, ಬೆಳೆಯ ಸ್ಥಿತಿ, ಮಣ್ಣಿನಲ್ಲಿರುವ ತೇವಾಂಶ ಹಾಗೂ ನೀರಿನ ಲಭ್ಯತೆಯನ್ನು ಪರಿಶೀಲಿಸಿ ಮಾಹಿತಿ ನೀಡಬೇಕು. ಈ ನೈಜ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿ ಬರಪೀಡಿತ ಜಿಲ್ಲೆ ಎಂದು ಘೋಷಣೆಗೆ ಶಿಫಾರಸು ಮಾಡಲಾಗುವುದು. ಕೆಟ್ಟುಹೋದ ಕೊಳವೆಬಾವಿಗಳನ್ನು ತಕ್ಷಣವೇ ದುರಸ್ತಿ ಮಾಡಿಸುವುದು. ಕುಡಿಯುವ ನೀರಿನ ತುರ್ತು ಪರಿಸ್ಥಿತಿಯನ್ನು ನಿರ್ವಹಿಸಲು ಅಥವಾ ಸಾರ್ವಜನಿಕ ಬಳಕೆಗಾಗಿ ಸ್ಥಳೀಯ ಆಡಳಿತ ಅಥವಾ ಗ್ರಾಮ ಪಂಚಾಯಿತಿಗಳು ಖಾಸಗಿ ಬೋರ್‌ವೆಲ್ ಮಾಲೀಕರೊಂದಿಗೆ ಲಿಖಿತ ಒಪ್ಪಂದ ಮಾಡಿಕೊಂಡು ಕುಡಿಯುವ ನೀರು ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 553 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಸುಸ್ಥಿರ ನಿರ್ವಹಣೆ ಹಾಗೂ ನಿರಂತರ ಕಾರ್ಯಾಚರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದರೆ ಅವುಗಳನ್ನು ತ್ವರಿತವಾಗಿ ದುರಸ್ತಿ ಮಾಡಿ ಸಾರ್ವಜನಿಕರಿಗೆ ನಿರಂತರವಾಗಿ ಸುರಕ್ಷಿತ ಕುಡಿಯುವ ನೀರು ದೊರೆಯುವಂತೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲೆಯಲ್ಲಿ ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ. ಸಾಕಷ್ಟು ಮೇವು ದಾಸ್ತಾನು ಲಭ್ಯವಿರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್, ತಾಪಂ ಇಒ ಮತ್ತು ಇಂಜಿನಿಯರ್‌ಗಳ ನೇತೃತ್ವದಲ್ಲಿ ಪ್ರತಿ ವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಾಗ ನೀರಿನ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷಿಸಬೇಕು. ನೀರಿನ ಮೂಲದ ಸುರಕ್ಷತೆ, ಕ್ಲೋರಿನೇಷನ್ ಮತ್ತು ಟ್ಯಾಂಕ್ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.