ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಮಾತನಾಡಿದರು.
- ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಡ್ಯ: ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮವನ್ನು ಕಾಲಮಿತಿಯೊಳಗೆ ತಲುಪಿಸಬೇಕು. ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಆದ್ಯತೆ ನೀಡಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮವು ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್ಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಲಾದ ಪ್ರಮುಖ ಯೋಜನೆಯಾಗಿದೆ ಎಂದರು.
ಅಲ್ಪಸಂಖ್ಯಾತ ಸಮುದಾಯದ 6 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಅಂಗನವಾಡಿ ಪ್ರವೇಶ ಪಡೆಯುತ್ತಾರೆ. ಆದರೆ ಮಕ್ಕಳು ಸೇರಿದ ನಂತರ ಕೆಲ ತಿಂಗಳ ನಂತರ ಹೊರಗುಳಿಯುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರು ಹೆಚ್ಚಿರುವ ಬಡಾವಣೆಗಳಲ್ಲಿ ಮನೆ-ಮನೆಗೆ ತೆರಳಿ ಅಂಗನವಾಡಿಯ ಪ್ರಯೋಜನಗಳ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 64 ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿವೆ. ಒಟ್ಟು 4,326 ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಹಾಜರಾಗುತ್ತಿದ್ದಾರೆ. ಈ ಬಗ್ಗೆ ಅಲ್ಪ ಸಂಖ್ಯಾತರು ಹೆಚ್ಚಿರುವ ಸ್ಧಳಗಳಿಗೆ ಭೇಟಿ ನೀಡಿ ಅಂಗನವಾಡಿ ಕೇಂದ್ರದಿಂದ ಹೊರಗುಳಿಯುವ ಕಾರಣ ತಿಳಿದು ಅದಕ್ಕೆ ಅಗತ್ಯ ಕ್ರಮ ವಹಿಸಬೇಕು. ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶವಿರುವ ವೃತ್ತಿ ಆಧಾರಿತ ತರಬೇತಿಯನ್ನು ಅರ್ಹರಿಗೆ ನೀಡುವುದರ ಜತೆಗೆ ಉದ್ಯೋಗಾವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ. ವೃತ್ತಿ ಕೌಶಲ ತರಬೇತಿ ನೀಡಿ. ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲ ವರ್ಗದ ಅರ್ಹರಿಗೂ ಉದ್ಯೋಗಾವಕಾಶ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಬೇಕು ಎಂದು ಸೂಚಿಸಿದರು.
ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಮೈಕ್ರೋ-ಕ್ರೆಡಿಟ್(ಕಿರು ಸಾಲ) ಯೋಜನೆಯನ್ನು ಅಲ್ಪಸಂಖ್ಯಾತ ಫಲನುಭವಿಗಳಿಗೆ ತಲುಪಿಸುವ ಕೆಲಸ ಆಗಬೇಕು. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯ ಬಗ್ಗೆ ಪದವಿ ಹಾಗೂ ಡಿಪ್ಲೋಮೋ ಪದವಿ ಪಡೆದ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಅರಿವು ಮೂಡಿಸಿ. ಈ ಯೋಜನೆಯ ಸದುಪಯೋಗ ಮಾಡಿಕೊಳ್ಳುವಂತೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಯೋಜನೆಗಳ ಅನುಷ್ಠಾನ ಹಾಗೂ ಸರ್ಕಾರದ ಸೌಲಭ್ಯಗಳು ಅಲ್ಪಸಂಖ್ಯಾತರಿಗೆ ಸಮರ್ಪಕವಾಗಿ ತಲುಪುತ್ತಿದೆ. ಈ ಸಂಬಂಧ ಅಗತ್ಯ ಕ್ರಮ ವಹಿಸಲಾಗಿದೆ. ಮಕ್ಕಳು ಶಾಲೆಯಿಂದ ಹೊರಗುಳಿಯಂದಂತೆ ಹಾಗೂ ಶಿಕ್ಷಣದಿಂದ ವಂಚಿತರಾಗದಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಲೀಡ್‌ಬ್ಯಾಂಕ್ ಮ್ಯಾನೇಜರ್ ಅರುಣ್‌ಕುಮಾರ್ ಮಾತನಾಡಿ, ಸರ್ಕಾರವು ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಹಾಗೂ ಉನ್ನತ ಶಿಕ್ಷಣಕ್ಕಾಗಿ ಬ್ಯಾಂಕ್‌ಗಳ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಹಾಗೂ ಸಬ್ಸಿಡಿ ಸೌಲಭ್ಯ ನೀಡುತ್ತಿವೆ. ಈ ಸಂಬಂಧ ಮಂಡ್ಯದಲ್ಲಿ ಶಿಕ್ಷಣಕ್ಕಾಗಿ 477 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಥಿ ನಿಗಮದ ವಿಶೇಷ ಕರ್ತವ್ಯಧಿಕಾರಿ ಮುಜಿಬುಲ್ ಜಫಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಣ್ಣ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.