ಮದ್ದೂರು ತಾಲೂಕಿನ ಹರಕನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ಮಾಡಿದರು. ಹರೀಶ್‌ಬಾಬು, ಕದಲೂರು ರಾಮಕೃಷ್ಣ, ದಾಸೇಗೌಡ, ಶಂಕರಲಿಂಗಯ್ಯ ಇದ್ದರು.
- ಶಾಸಕ ಕೆ.ಎಂ.ಉದಯ್
- ಬಸವಲಿಂಗನದೊಡ್ಡಿ, ಮಲ್ಲನಾಯಕನಹಳ್ಳಿ ಹಾಗೂ ಹರಕನಹಳ್ಳಿ
ಮದ್ದೂರು: ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ವ್ಯವಸ್ಥೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಒದಗಿಸಲು 1 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ಬಸವಲಿಂಗನದೊಡ್ಡಿ, ಮಲ್ಲನಾಯಕನಹಳ್ಳಿ ಹಾಗೂ ಹರಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಂದಾಜು 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಮೂರು ವರ್ಷಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾಗಿದ್ದ ಡಿ.ಕೆ.ಶಿವಕುಮಾರ್ ಅವರ ಬಳಿ ಸಾಕಷ್ಟು ಮನವಿ ಮಾಡಿ 2 ಸಾವಿರ ಕೋಟಿ ರೂ. ಅನುದಾನ ತಂದಿದ್ದು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ, ಗ್ರಾಮೀಣ ರಸ್ತೆಗಳು, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.
ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ಮೊದಲ ಬಾರಿಗೆ ಶಾಸಕನನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಮುಂದೆಯೂ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಆತಗೂರು ಹೋಬಳಿಯ ಬಹುಮುಖ್ಯ ಸಮಸ್ಯೆ ಕುಡಿಯುವ ನೀರು. ಈಗಾಗಲೇ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 175 ಕೋಟಿ ರೂ.ವೆಚ್ಚದಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಆತಗೂರು ಹೋಬಳಿಯ ರೀ ಸರ್ವೇ ಸಮಸ್ಯೆ ಅರ್ಜಿಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ಇನ್ನು 200 ಅರ್ಜಿಗಳ ಮಾತ್ರ ಬಾಕಿ ಇವೆ. ಅವುಗಳನ್ನೂ ಅಧಿಕಾರಿಗಳು ಶೀಘ್ರ ಬಗೆಹರಿಸಲಿದ್ದಾರೆ ಎಂದು ತಿಳಿಸಿದರು.
ಮದ್ದೂರು ನಗರದ ರಸ್ತೆ ವಿಸ್ತರಣೆಗೆ 100 ಕೋಟಿ ರೂ., ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರೂ., ನ್ಯಾಯಾಲಯ ಸಂಕೀರ್ಣ, ತಾಲೂಕು ಆಸ್ಪತ್ರೆ ಮೇಲ್ದರ್ಜೆ, ನಗರಸಭಾ ಕಟ್ಟಡ, ಮಾರುಕಟ್ಟೆಗಳ ನಿರ್ಮಾಣ ಸೇರಿದಂತೆ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಇನ್ನೆರಡು ವರ್ಷಗಳಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಕೆಸ್ತೂರು ದಾಸೇಗೌಡ, ಶಂಕರಲಿಂಗಯ್ಯ, ಶಿವರಾಮು, ದಾಸೇಗೌಡ, ವಾಸು, ನಾಗರಾಜು, ಪುಟ್ಟೇಗೌಡ, ಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.