ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕನ್ನಡ ಸೇನೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
- ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪ
- ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಆಕ್ರೋಶ
ಮಂಡ್ಯ: ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಬಗ್ಗೆ ಬಿಜೆಪಿ ಕಾರ್ಯಕರ್ತರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕನ್ನಡ ಸೇನೆ ಸಂಘಟನೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕನ್ನಡಸೇನೆ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದರು. ಹಿರಿಯ ಕನ್ನಡದ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಅಯೋಗ್ಯ ಎನ್ನುವ ಮೂಲಕ ಬಿಜೆಪಿ ಕಾರ್ಯಕರ್ತರು ಸಣ್ಣತನ ತೋರ್ಪಡಿಸಿದ್ದಾರೆ. ಅವರ ಭಾವಚಿತ್ರವನ್ನು ಚಪ್ಪಲಿಯಿಂದ ತುಳಿದು ಅವಮಾನಿಸಿರುವ ಬಿಜೆಪಿ ಕಾರ್ಯಕರ್ತರು ಈ ನಾಡಿನ ಕನ್ನಡ ಹೋರಾಟಗಾರರಿಗೆ ಅಪಮಾನ ಮಾಡಿದ್ಧಾರೆಂದು ಆಕ್ರೋಶ ಹೊರ ಹಾಕಿದರು.
1963ರಲ್ಲಿ ಮಹಾನಗರ ಪಾಲಿಕೆ ಸದಸ್ಯರಾಗಿ, 1967ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನಾಡಿನ ಉದ್ದಗಲಕ್ಕೂ ಅಖಂಡ ಕರ್ನಾಟಕ ಒಗ್ಗೂಡಿಸಲು ಬಿಡುವಿಲ್ಲದ ಸಂದರ್ಭದಲ್ಲೂ ವಿನೂತನ, ವಿಶಿಷ್ಟ ಹೋರಾಟಗಳ ಸದನಗಳಲ್ಲೂ ಹೋರಾಟ ಮಾಡಿದವರು. ನಾಡಿನ ಅಸ್ಮಿತೆಗಾಗಿ 70ಕ್ಕೂ ಹೆಚ್ಚು ವರ್ಷಗಳಿಂದ ಹೋರಾಟವನ್ನು ಮೈಗೂಡಿಸಿಕೊಂಡು ಬಂದಿರುವ ಕನ್ನಡ ನಾಡಿನ ಹೋರಾಟಗಾರರಿಗೆ ಮಾಣಿಕ್ಯ ವಾಟಾಳ್ ನಾಗರಾಜ್ ಅವರ ವಿರುದ್ದ ಬಾಯಿಗೆ ಬಂದಂತೆ ಮಾತನಾಡಿರುವುದನ್ನು ಖಂಡಿಸುತ್ತೇವೆ. ಈ ಹಿನ್ನೆಲೆಯಲ್ಲಿ ತಕ್ಷಣ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಬಂಧನ ಮಾಡದಿದ್ದರೆ ತೀವ್ರ ರೂಪದ ಹೋರಾಟಗಳನ್ನು ರೂಪಿಸಬೇಕಾಗುತ್ತದೆಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಕುಮಾರ, ಜಯಮ್ಮ, ಪಾಂಡುರಂಗ ಇತರರಿದ್ದರು.