ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. 
ಮಂಡ್ಯ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕೆ.ಎನ್.ರಾಘವೇಂದ್ರ
ಮಂಡ್ಯ: ಪ್ರೋತ್ಸಾಹಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಜಮಾವಣೆಗೊಂಡ ಕಾರ್ಯಕರ್ತೆಯರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಸಮಸ್ತ ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡಬೇಕು. ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಆರ್‌ಸಿಎಚ್ ಪೋರ್ಟಲ್ ಮೂಲಕ ಕೇಂದ್ರದ ಪ್ರೋತ್ಸಾಹ ಧನ ಕೆಲಸ ಮಾಡಿದಷ್ಟು ಬರುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಂಪೋನೆಂಟ್‌ಗಳ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಇಲ್ಲಿಯವರಿಗೆ ನಿವೃತ್ತಿ ಆಗಿರುವ ಆಶಾಗಳಿಗೆ ನಿಯಮಾನುಸಾರ ಬಾಕಿ ಇರುವ ಇಡಿಗಂಟು ನೀಡಬೇಕು. ಯಾವುದೇ ಸೂಕ್ತ ಕಾರಣಗಳಿಲ್ಲದೆ ವಜಾ ಮಾಡಿರುವ ಆಶಾ ಕಾರ್ಯಕರ್ತೆಯನ್ನು ಕೂಡಲೇ ಕೆಲಸದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನಾಗಮ್ಮ, ಪಿ.ಜ್ಯೋತಿ, ಪಲ್ಲವಿ, ರುಕ್ಮಿಣಿ, ಮಂಜುಳಾ, ಶಾರದಾ, ವಿ.ಜ್ಯೋತಿ ಇತರರಿದ್ದರು.