ಎಚ್.ಬಸಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
- ಪಿಡಿಒಗೆ ಮನವಿ ಸಲ್ಲಿಸಿದ ಕಾರ್ಯಕರ್ತರು
ಹಲಗೂರು: ರಾಜ್ಯದ ಪರಿಶಿಷ್ಟ ಸಮುದಾಯದ ಜನರ ಶ್ರೇಯೋಭಿವೃದ್ಧಿಗಾಗಿ ಮೀಸಲಾಗಿದ್ದ ಅನುದಾನವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸದೇ ದ್ರೋಹ ಎಸಗಿದೆ ಎಂದು ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೃಷ್ಣ ಆರೋಪಿಸಿದರು.
ಹಲಗೂರು ಸಮೀಪದ ಎಚ್.ಬಸಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆ ಆಚರಣೆ ನಿಷೇಧ ಇದ್ದರೂ, ಸಹ ಅಸ್ಪೃಶ್ಯರ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ ಪ್ರತಿ ದಿನವೂ ಹೆಚ್ಚಾಗುತ್ತಲೇ ಇವೆ. ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು, ತ್ವರಿತ ನ್ಯಾಯಕ್ಕಾಗಿ ಜಿಲ್ಲೆಗೊಂದು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷೆ ಸುನಂದಾ, ಖಜಾಂಚಿ ಮಂಜುಳಾ, ಸದಸ್ಯರಾದ ಜ್ಯೋತಿಮಣಿ, ಸುಶೀಲಾ, ಅನಿತಾ, ಗೌರಮ್ಮ, ಸವಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು.