ಮಂಡ್ಯ ನಗರದ ಸರ್‌ಎಂವಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ಮಂಡ್ಯ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಮಹಿಳಾ ಮೀಸಲಾತಿ ಮಸೂದೆ ವಿರೋಧ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿ
  • ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಮಂಡ್ಯ: ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ ಮಾತನಾಡಿ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜತೆಗೆ ಡಿಲಿಮಿಟೇಶನ್ ಕಾಯ್ದೆ ಜಾರಿಗೊಳಿಸುತ್ತಿರುವುದರಲ್ಲಿ ಬಿಜೆಪಿಯ ಕುತಂತ್ರ ಅಡಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವುದಕ್ಕೆ ಕಾಂಗ್ರೆಸ್‌ನ ಯಾವುದೇ ತಕರಾರಿಲ್ಲ. 1998ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರಿಚಯಿಸಿ, 2010ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ, ಈಗ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜತೆಗೆ ಡಿಲಿಮಿಟೇಶನ್ ಕಾಯ್ದೆ ಜಾರಿಗೊಳಿಸುತ್ತಿರುವುದು ಸರಿಯಲ್ಲ ಎಂದರು.
ಲೋಕಸಭೆಯ 543 ಸ್ಥಾನಗಳಲ್ಲಿ ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಉದ್ದೇಶವುಳ್ಳ ಡಿಲಿಮಿಟೇಶನ್ ಕಾಯ್ದೆ ಜಾರಿಯಿಂದ ದಕ್ಷಿಣ ಭಾರತ ಆರು ರಾಜ್ಯಗಳಿಗೆ ಅನ್ಯಾಯವಾಗಲಿದೆ. ಆದರೆ ಕಾಯ್ದೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಿ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಲೋಕಸಭಾ ಅಧಿವೇಶನದಲ್ಲಿ ಕ್ಷೇತ್ರ ಮರು ವಿಂಗಡಣೆ ಮಸೂದೆ ಪಾಸ್ ಆಗಿಲ್ಲ. ಅವೈಜ್ಞಾನಿಕ ಮಸೂದೆ ತರಲು ಕೇಂದ್ರ ಸರ್ಕಾರ ಹೊರಟಿತ್ತು. ಒಗ್ಗಟ್ಟಿನಿಂದ ಅವೈಜ್ಞಾನಿಕ ಮಸೂದೆಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿ ಸರ್ಕಾರ ಆದಷ್ಟೂ ಬೇಗ ಬಿಟ್ಟು ತೊಲಗಲಿ. ಮಹಿಳಾ ಮೀಸಲಾತಿ ಮಸೂದೆ ಸೋಲಾಗಿರುವುದನ್ನು ಸ್ವಾಗತಿಸುತ್ತೇವೆ. ಇದಕ್ಕೆ ಇಂಡಿಯಾ ಒಕ್ಕೂಟದವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸುಂಡಹಳ್ಳಿ ಮಂಜುನಾಥ್, ಸಿ.ಎಂ.ದ್ಯಾವಪ್ಪ, ಕನ್ನಲಿ ಚನ್ನಪ್ಪ, ಚಂದಗಾಲು ವಿಜಯ್‌ಕುಮಾರ್, ಅಭಿಲಾಷ್, ಶ್ರೀಧರ್, ಕೃಷ್ಣ, ಆನಂದ್, ಕಮಲರಾಜು, ನಾಗಮಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.