ಮಂಡ್ಯದಲ್ಲಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. 
ಮಂಡ್ಯ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ಒತ್ತಾಯ: ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ರೈತರ ವಿರುದ್ದ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲಿ
  • ಸಿಎಂ ಡಿ.ಕೆ.ಶಿವಕುಮಾರ್‌ಗೆ ಮನವಿ ಸಲ್ಲಿಕೆ
ಮಂಡ್ಯ: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈ ಬಿಡುವಂತೆ ಹಾಗೂ ರೈತರ ವಿರುದ್ದ ದಾಖಲಿಸಿರುವ ಕೊಲೆ ಯತ್ನ ಸೇರಿದಂತೆ ಎಲ್ಲ ಪ್ರಕರಣಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವರ್ಷ ಸಮರ್ಪಕವಾಗಿ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಅಣೆಕಟ್ಟೆ, ಕೆರೆ-ಕಟ್ಟೆಗಳು ಹಾಗೂ ಇತರೆ ಜಲಮೂಲಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಹಿನ್ನಡೆಯಾಗಿವೆ. ಸಾಲ ಮಾಡಿ ಬೆಳೆ ಬೆಳೆದ ಸಾವಿರಾರು ರೈತರ ಬೆಳೆಗಳು ನೀರಿನ ಕೊರತೆಯಿಂದ ಒಣಗಿ ನಾಶವಾಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆಯೇ ದುಸ್ತರವಾಗಿದೆ ಎಂದು ಒತ್ತಾಯಿಸಲಾಯಿತು.
ಸಂಘದ ರಾಜ್ಯ ಸಂಚಾಲಕ ಹಾಡ್ಯ ರಮೇಶ್‌ರಾಜು ಮಾತನಾಡಿ, ಸರ್ಕಾರವು ತಕ್ಷಣವೇ ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶಗಳನ್ನು ತಕ್ಷಣ ಘೋಷಿಸಬೇಕು. ಈ ಮೂಲಕ ರೈತರನ್ನು ಉಳಿಸುವ ಉದ್ದೇಶ ಇಟ್ಟುಕೊಂಡು ಬೆಳೆ ನಷ್ಟದ ಪರಿಹಾರವನ್ನು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ, ರೈತ ಬೆಳೆ ಬೆಳೆಯಲು ಮಾಡಿರುವ ಸಂಪೂರ್ಣ ಖರ್ಚನ್ನು ಯಾವುದೇ ವಿಳಂಬವಿಲ್ಲದೆ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ತೀವು ಕೊರತೆಯಾಗಿದ್ದು, ರೈತರು ತಮ್ಮ ಜಾನುವಾರುಗಳನ್ನು ಸಾಕುವುದು ಕಷ್ಟಕರವಾಗಿದೆ. ಹೀಗಾಗಿ ಸರ್ಕಾರವು ತಕ್ಷಣ ಗೋಶಾಲೆಗಳನ್ನು ತೆರೆಯುವುದರ ಜತೆಗೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸಿ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯವನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ, ಕೇಂದ್ರ ಸರ್ಕಾರದಿಂದ ವಿಶೇಷ ಬರ ಪರಿಹಾರ ಪ್ಯಾಕೇಜ್ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಳೆ ನಷ್ಯದ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ. ರೈತರಿಗೆ ಸೂಕ್ತ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.
ರೈತರ ಕೃಷಿ ಸಾಲ ಮನ್ನಾ ಮಾಡಿ ಹಾಗೂ ಅಗತ್ಯ ನೆರವು ಒದಗಿಸಬೇಕು. ಏಕೆಂದರೆ ಬೆಳೆ ನಷ್ಟದಿಂದ ರೈತ ಎಚ್ಚೆತ್ತುಕೊಳ್ಳಲು ಕನಿಷ್ಟ ಎರಡು ವರ್ಷಗಳಾದರೂ ಬೇಕಾಗುತ್ತದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ, ಉಚಿತ ಮೇವು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಯೋಜನೆಯಡಿ ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಸಂಪೂರ್ಣ ವಿಮೆ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಬರಪೀಡಿತ ರೈತರಿಗೆ ಮುಂದಿನ ಹಂಗಾಮಿನ ಬಿತ್ತನೆಗಾಗಿ ರೈತರಿಗೆ ಉಚಿತ ಬೀಜ, ರಸಗೊಬ್ಬರ, ಕೃಷಿ ಔಷಧ ಹಾಗೂ ಅಗತ್ಯ ಕೃಷಿ ಪರಿಕರಗಳನ್ನು ಒದಗಿಸಬೇಕು. ಬರಪೀಡಿತ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗದ ದಿನಗಳನ್ನು ಹೆಚ್ಚಿಸಿ ಗ್ರಾಮೀಣ ಕುಟುಂಬಗಳಿಗೆ ತಕ್ಷಣ ಉದ್ಯೋಗಾವಕಾಶ ಕಲ್ಪಿಸಬೇಕು. ಬರ ಪರಿಸ್ಥಿತಿಯನ್ನು ನೆಪವನ್ನಾಗಿ ಮಾಡಿಕೊಂಡು ಮೇವು, ಆಹಾರ ಧಾನ್ಯ, ರಸಗೊಬ್ಬರ ಮತ್ತು ಕೃಷಿ ಸಾಮಗ್ರಿಗಳ ಬೆಲೆ ಏರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಬರಪೀಡಿತ ಪ್ರದೇಶಗಳ ರೈತರಿಗೆ ಕನಿಷ್ಟ ಒಂದು ವರ್ಷದವರೆಗೆ ಭೂ ಕಂದಾಯ ಹಾಗೂ ಕೃಷಿಗೆ ಸಂಬಂಧಿಸಿದ ಎಲ್ಲ ಸರ್ಕಾರಿ ಶುಲ್ಕಗಳಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.
ತೀರಾ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನಿರಂತರ ಉಚಿತ ನೀರು ಸರಬರಾಜು ಮಾಡಬೇಕು. ಬರದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಕನಿಷ್ಟ 125 ಲಕ್ಷ ರೂ ಪರಿಹಾರ, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಹಾಗೂ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು. ಪ್ರತಿ ತಾಲೂಕಿನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ, ರೈತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ವಿಶೇಷ ಅಧಿಕಾರಿಗಳನ್ನು ನೇಮಿಸಬೇಕು. ಬಡ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ ಹಿಂದೆ ಇದ್ದಂತೆ ರೈತ ವಿದ್ಯಾ ನಿಯನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಅಪ್ಪಾಜಿ ಬೂದನೂರು, ಶಿವಣ್ಣ, ಜಯರಾಮು, ಪುಟ್ಟಮ್ಮ, ರಾಘವೇಂದ್ರ ಇತರರಿದ್ದರು.