ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳು ಎತ್ತಿನಗಾಡಿ ಮೂಲಕ ಚಳವಳಿ ನಡೆಸಲಾಯಿತು.
- ವಾಣಿಜ್ಯ ಸಿಲಿಂಡರ್ ಹಾಗೂ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಅಸಮಾಧಾನ
- ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು
ಮಂಡ್ಯ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ನಗರದಲ್ಲಿ ಕನ್ನಡಪರ ಸಂಘಟನೆಗಳು ಎತ್ತಿನಗಾಡಿ ಮೂಲಕ ಚಳವಳಿ ನಡೆಸಲಾಯಿತು.
ಸಿಲ್ವರ್ ಜ್ಯುಬಿಲಿ ಉದ್ಯಾನದಿಂದ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದವರೆಗೆ ಮೆರವಣಿಗೆ ಸಾಗಿದರು. ಅಂತೆಯೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ವಾಣಿಜ್ಯ ಸಿಲಿಂಡರ್ ಹಾಗೂ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು, ಬಡವರಿಗೆ ಕಷ್ಟವಾಗುತ್ತಿದೆ. ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಕೇಂದ್ರ ಸರ್ಕಾರವೇ ಮಿತ ಬಳಕೆಗೆ ಆದೇಶ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಲಕ್ಷಾಂತರ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಇನ್ನು ರೈಲ್ವೆ, ಅಂಚೆ ತಂತಿ, ಬ್ಯಾಂಕ್‌ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಜತೆಗೆ ಕನ್ನಡದಲ್ಲೇ ವ್ಯವಹಾರ ನಡೆಯಲೇಬೇಕು. ಉದ್ಯೋಗ ಪರಭಾಷಿಗರಿಗೆ ಸಿಗುತ್ತಿದೆ. ಆದರೆ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಕರ್ನಾಟಕದಲ್ಲಿರುವ ಬಹುತೇಕ ಕಾರ್ಖಾನೆಗಳು ಕನ್ನಡ ವಿರೋಧಿಗಳು, ಕನ್ನಡಿಗರಿಗೆ ಉದ್ಯೋಗ ನೀಡದಿದ್ದರೆ ಕುಡಿಯುವ ನೀರು, ವಿದ್ಯುತ್ ಹಾಗೂ ಜಮೀನನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಕನ್ನಡಪರ ಹೋರಾಟಗಾರ ಎಚ್.ವಿ.ಗಿರೀಶ್‌ಗೌಡ, ಮಂಡಿಬೆಟ್ಟಹಳ್ಳಿ ಮಂಜುನಾಥ್, ವೇಣುಗೋಪಾಲ್,ಪ್ರಸನ್ನ, ಅರಕೆರೆ ರಘು, ಯರಹಳ್ಳಿ ಕುಮಾರ್, ನಾಗೇಶ್ ಇತರರಿದ್ದರು.