ಮಂಡ್ಯ ನಗರದಲ್ಲಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ, ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ಮಂಡ್ಯ

ಪಶ್ಚಿಮ ಬಂಗಾಳದದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವು: ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ

ಮಂಡ್ಯ: ಪಶ್ಚಿಮ ಬಂಗಾಳದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವು ಮಾಡುತ್ತಿರುವುದು ಹಾಗೂ ಸಿಪಿಎಂ ನಾಯಕರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ, ಸಿಐಟಿಯು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಸ್ಪತ್ರೆ ರಸ್ತೆಯ ಬದಿ ಜಮಾವಣೆಗೊಂಡ ಕಾರ್ಯಕರ್ತರು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳ, ಗುಜರಾತ್ ಹಾಗೂ ಕರ್ನಾಟಕದ ಬೆಂಗಳೂರಿನ ಹಲವು ಕಡೆ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವು ಮಾಡುತ್ತಿರುವ ಕ್ರಮ ಸರಿಯಲ್ಲ. ಅವರಿಗೆ ಪುನರ್ವಸತಿ ಕಲ್ಪಿಸಿದ ನಂತರ ತೆರವು ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನು ಪ್ರಶ್ನೆ ಮಾಡಲು ಹೋದ ಸಿಪಿಐಎಂ ನಾಯಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇವರಿಗೆ ತಕ್ಕಶಾಸ್ತಿ ಆಗಬೇಕು. ಮುಖ್ಯವಾಗಿ ಬಿಜೆಪಿ ಸರ್ಕಾರವು ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿದೆ. ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಮಂಡಳಿ ಸದಸ್ಯ ಸಯ್ಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಭರತ್‌ರಾಜ್, ಎಂ.ಪುಟ್ಟಮಾದು, ಸಿ.ಕುಮಾರಿ, ಬಿ.ಹನುಮೇಶ್, ಲಿಂಗರಾಜಮೂರ್ತಿ, ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ದೇವಿ ಯಶ್ವಂತ್ ಭಾಗವಹಿಸಿದ್ದರು.