ಡಿಸಿ ಕುಮಾರ್ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಊಟದ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. 
ಮಂಡ್ಯ

ಸಾರ್ವಜನಿಕರ ಅಹವಾಲು ಶೀಘ್ರ ಇತ್ಯರ್ಥಗೊಳಿಸಿ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ
  • ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ
ಕೆ.ಆರ್.ಪೇಟೆ: ತಾಲೂಕು ಕಚೇರಿ, ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ವಸ್ತು ಸಂಗ್ರಹ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕು ಕಚೇರಿ ವಿವಿಧ ಶಾಖೆಗಳನ್ನು ಪರಿಶೀಲಿಸಿ ಕಚೇರಿ ಕಾರ್ಯ ನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಟಾನ ಹಾಗೂ ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಸೀಲ್ದಾರ್‌ಗೆ ಸೂಚನೆ ನೀಡಿದರು.
ಇ-ಆಫೀಸ್ ವ್ಯವಸ್ಥೆಯಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಡಿಜಿಟಲ್ ಕಾರ್ಯ ವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ನಿರ್ದೇಶನ ನೀಡಿದರು. ಆದಾಯ, ಜಾತಿ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ ವಿಳಂಬ ಕಂಡು ಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಭಿಲೇಖಾಲಯ ಶಾಖೆಯ ದಾಖಲೆ ನಿರ್ವಹಣೆ ಹಾಗೂ ಡಿಜಿಟಲೀಕರಣಕ್ಕೆ ಒತ್ತು ನೀಡಿ, ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ವಸೂಲಿ ಮಾಡಿ ದಾಖಲೆಗಳನ್ನು ಸರಿಯಾಗಿ ಸಂರಕ್ಷಿಸುವಂತೆ ಸೂಚಿಸಿದರು. ಹೋಬಳಿ ಮಟ್ಟದ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿಯೇ ಲಭ್ಯವಿದ್ದು ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕು, ಕಚೇರಿ ಶಿಸ್ತು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರದ ನಿಯಮಾವಳಿ ಪಾಲಿಸಿ ಸಾರ್ವಜನಿಕರಿಗೆ ಸಕಾಲಕ್ಕೆ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸುವಂತೆ ಸೂಚಿಸಿದರು.
ಇಂದಿರಾ ಕ್ಯಾಂಟೀನ್ ಪರಿಶೀಲನೆ: ಕ್ಯಾಂಟೀನ್‌ನ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ವಿತರಣೆ ವ್ಯವಸ್ಥೆ, ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಸರ್ಕಾರದ ನಿಗದಿತ ಮಾರ್ಗಸೂಚಿಗಳ ಪಾಲನೆ, ಸಿಬ್ಬಂದಿ ಹಾಜರಾತಿ, ಕರ್ತವ್ಯ ನಿರ್ವಹಣೆ ಹಾಗೂ ಶಿಸ್ತು ಪಾಲನೆ ಪರಿಶೀಲಿಸಿದರು. ಕ್ಯಾಂಟೀನ್‌ಗೆ ಆಗಮಿಸಿದ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.
ಬಳಿಕ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಡಿಸಿ ಭೇಟಿ ನೀಡಿ ಸ್ವಚ್ಛ ಭಾರತ್ ಮಿಷನ್ (ನಗರ) ಯೋಜನೆಯ ತಾಂತ್ರಿಕ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಕಸ ಸಂಗ್ರಹಣೆ, ಮೂಲದಲ್ಲಿಯೇ ಕಸ ವಿಂಗಡಣೆ, ಸಂಸ್ಕರಣೆ, ಮರುಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿ ಪ್ರಕ್ರಿಯೆಗಳ ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿದರು. ಮನೆಮನೆ ಕಸ ನಿಯಮಿತ ಸಂಗ್ರಹಣೆ, ಹಸಿ-ಒಣ ಕಸ ವಿಂಗಡಣೆ ಕಡ್ಡಾಯ ಮಾಡುವಂತೆ ಸಲಹೆ ನೀಡಿದರು.