ಮಂಡ್ಯದಲ್ಲಿ ಆಯೋಜಿಸಿದ್ದ ಸಂಚಾರ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭರಾಣಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಚಾಲನೆ ನೀಡಿದರು.  
ಮಂಡ್ಯ

ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭರಾಣಿ ಹೇಳಿಕೆ

ಕೆ.ಎನ್.ರಾಘವೇಂದ್ರ

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
  • ನಿಯಮಗಳನ್ನು ಪಾಲಿಸದ ಪರಿಣಾಮ ಅಪಘಾತಗಳು ಹೆಚ್ಚಳ
  • ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
ಮಂಡ್ಯ: ಯುವ ಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಪರಿಣಾಮ ಅಪಘಾತಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯುವ ಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭರಾಣಿ ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಂಚಾರ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸ್ತೆ ಅಪಘಾತಗಳು ಎರಡು ರೀತಿ ಜರುಗುತ್ತದೆ. ಅದರಲ್ಲಿ ರಸ್ತೆ ಸರಿಯಿಲ್ಲದೇ ಹಾಗೂ ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ನಡೆಯುತ್ತಿದೆ. ಹೀಗಾಗಿ ರಸ್ತೆ ಸುರಕ್ಷತೆ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ದ್ವಿಚಕ್ರ ವಾಹನಗಳಲ್ಲಿ ಮೂವರು ಚಾಲನೆ ಮಾಡುವುದು, ವಾಹನ ಚಲಿಸುವಾಗ ಮೊಬೈಲ್ ಬಳಕೆ ಮಾಡುವುದು ಕಾನೂನು ಬಾಹಿರ ಎಂದು ಹೇಳಿದರು.
ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತ ನಡೆಯುತ್ತಿದೆ. ಪ್ರತಿ ವರ್ಷ ಸುಮಾರು 500 ರಿಂದ 600 ಜನ ರಸ್ತೆ ಅಪಘಾತದಿಂದ ಸಾವನಪ್ಪುತ್ತಿರುವುದು ವಿಷಾದಕರ ಸಂಗತಿ. ಇದನ್ನು ತಡೆಗಟ್ಟಲು ಸುರಕ್ಷತೆ ವಾಹನ ಚಾಲನೆ ಮಾಡುವುದರ ಜತೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ಸಂಚಾರ ನಿಯಮಗಳ ಪಾಲನೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ವರ್ಷ ಪೂರ್ತಿ ರಸ್ತೆ ಸುರಕ್ಷತೆ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ ಮಾತನಾಡಿ, ವಾಹನ ಚಾಲನೆಯಲ್ಲಿ ಯುವ ಜನತೆ ಸಾಕಷ್ಟು ಪ್ರಮಾಣದಲ್ಲಿ ಸಾವನಪ್ಪುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಯುವ ಜನತೆ ಹಾಗೂ ಸಾರ್ವಜನಿಕರು ಸಂಚಾರ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಎಸ್.ಇ.ಗಂಗಾಧರಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚೆಲುವಯ್ಯ, ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣಪ್ರಸಾದ್, ಸಂಚಾರ ಠಾಣೆ ಎಸ್‌ಐ ಎಚ್.ಆರ್.ಸಿದ್ದಪ್ಪ ಇತರರಿದ್ದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಯಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಿದರು.