ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಕದಲೂರು ರಾಮಕೃಷ್ಣ, ನಾಗೇಗೌಡ, ಜೈ ಶಂಕರ್, ನಟರಾಜ್ ಇದ್ದರು. 
ಮಂಡ್ಯ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಗುರಿ

ನಾಗೇಶ ಎಸ್
ಮದ್ದೂರು: ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಕೆ.ಎಂ. ಉದಯ್ ತಿಳಿಸಿದರು.
ತಾಲೂಕಿನ ಹೆಮ್ಮನಹಳ್ಳಿ, ಯರಗನಹಳ್ಳಿ, ತೊರೆಶೆಟ್ಟಿಹಳ್ಳಿ, ಹನುಮಂತಪುರ ಹಾಗೂ ಆಲಂ ಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಬುಧವಾರ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರದ ರಸ್ತೆಗಳು ಮಾದರಿಯಾಗಿರಬೇಕು ಎನ್ನುವುದು ನನ್ನ ಬಯಕೆಯಾಗಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಯ ಗುರಿ ಹೊಂದಿದ್ದೇನೆ. ಗ್ರಾಮಸ್ಥರು ರಸ್ತೆ ಅಭಿವೃದ್ಧಿಗಾಗಿ ಮನವಿ ಮಾಡುತ್ತಾರೆ. ಹೀಗಾಗಿ ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಕಾಮಗಾರಿ ಕೈಗೊಂಡಿರುವುದಾಗಿ ತಿಳಿಸಿದರು.
ರಸ್ತೆಗಳು ಗುಣಮಟ್ಟದಿಂದ ಕೂಡಿದ್ದರೆ ಸ್ಥಳಿಯ ಜನರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲವಾಗುತ್ತದೆ. ಜತೆಗೆ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ, ಇದನ್ನರಿತು ತಾಲೂಕಿನ ಪ್ರತಿ ಗ್ರಾಮದಲ್ಲೂ ರಸ್ತೆಗಳ ಅಭಿವೃದ್ಧಿ ಮಾಡಬೇಕು, ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪಟ್ಟಿ ಮಾಡಿಕೊಂಡು ಆದ್ಯತೆ ಮೇರೆಗೆ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ತಾಲೂಕಿನಲ್ಲಿ ರಸ್ತೆಗಳು, ಚರಂಡಿಗಳು, ನೀರಾವರಿ, ಶಿಕ್ಷಣ, ಕುಡಿಯುವ ನೀರು ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಗಮನ ನೀಡಲಾಗಿದೆ. ಈಗಾಗಲೇ ಸುಮಾರು 2 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ರಾಜ್ಯಕ್ಕೆ ಮದ್ದೂರನ್ನು ಮಾದರಿ ತಾಲೂಕು ಮಾಡುವುದೇ ನನ್ನ ಗುರಿಯಾಗಿದೆ ಎಂದರು.
ಮುಂದೆಯೂ ಸರ್ಕಾರದಿಂದ ವಿಶೇಷ ಅನುದಾನ ತಂದು ತಾಲೂಕಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ತಾಲೂಕು ಮಾಜಿ ಅಧ್ಯಕ್ಷ ತೊರೆಶೆಟ್ಟಿಹಳ್ಳಿ ನಾಗೇಗೌಡ, ಹೆಮ್ಮನಹಳ್ಳಿ ಜೈ ಶಂಕರ್, ಯರಗನಹಳ್ಳಿ ಮಹಾಲಿಂಗು, ನಟರಾಜ್ ಸೇರಿದಂತೆ ಹಲವರು ಹಾಜರಿದ್ದರು.