ಮಂಡ್ಯ ನಗರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಉದ್ಘಾಟಿಸಿದರು.
- ವಿಶ್ವ ಹಿರಿಯ ನಾಗರಿಕರ ದಿನಾಚರಣೆ
- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗ
ಮಂಡ್ಯ: ಹಿರಿಯರು ಕುಟುಂಬದ ಶಕ್ತಿಯಾಗಿದ್ದು, ಯುವಜನರು ಉತ್ತಮವಾಗಿ ಬೆಳೆಯಲು ಅವರ ಆಶೀವಾರ್ದ ಹಾಗೂ ಮಾರ್ಗದರ್ಶನ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ತಿಳಿಸಿದರು.
ನಗರದ ಸರ್‌ಎಂವಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಆರೋಗ್ಯ ಉಚಿತ ತಪಾಸಣೆ, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರು ತಮ್ಮ ಜೀವನದಲ್ಲಿ ಎದುರಿಸಿದ ಕಷ್ಟಗಳು ಹಾಗೂ ಅನುಭವಗಳ ಮೂಲಕ ಕುಟುಂಬದ ಸದಸ್ಯರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಾರೆ. ಪ್ರತಿ ಕುಟುಂಬದಲ್ಲೂ ಹಿರಿಯರಿದ್ದಾಗ ಸಾಮರಸ್ಯ, ಅಭಿವೃದ್ಧಿ ಹಾಗೂ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗುತ್ತದೆ ಎಂದರು.
ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆಯುವ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಅರ್ಹರಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಒಂದು ವೇಲೆ ಹಿರಿಯ ನಾಗರಿಕರಿಗೆ ಸೌಲಭ್ಯ ದೊರೆಯದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪಡೆದುಕೊಳ್ಳಬೇಕು. ಇದು ಹಿರಿಯ ನಾಗರಿಕರ ಹಕ್ಕಾಗಿದ್ದು, ಸೌಲಭ್ಯಗಳನ್ನು ಪಡೆಯಲು ಯಾರ ಮುಂದೆಯೂ ಬೇಡಿಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.
ಹಿರಿಯರು ತಮ್ಮ ಆಸ್ತಿ ಹಾಗೂ ಆರ್ಥಿಕ ಭದ್ರತೆಯ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಜೀವನ ನಿರ್ವಹಣೆಗೆ ಅಗತ್ಯವಿರುವ ಆಸ್ತಿ ಅಥವಾ ಹಣವನ್ನು ತಮ್ಮ ಜೀವಿತಾವಧಿಯಲ್ಲಿ ಸುರಕ್ಷಿತವಾಗಿ ಉಳಿಸಿಕೊಳ್ಳಬೇಕು. ಮಕ್ಕಳಿಗೆ ಆಸ್ತಿ ವರ್ಗಾಯಿಸುವ ಸಂದರ್ಭದಲ್ಲಿ ತಮ್ಮ ಜೀವನ ನಿರ್ವಹಣೆ ಹಾಗೂ ಆರೈಕೆಗೆ ಅಗತ್ಯವಿರುವ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು. ಹಿರಿಯ ನಾಗರಿಕರಿಗೆ ಕಾನೂನು ಸಮಸ್ಯೆಗಳು ಎದುರಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಅಲ್ಲಿ ಉಚಿತ ಕಾನೂನು ಸಲಹೆ, ವಕೀಲರ ಸೇವೆ ಹಾಗೂ ಕಾನೂನು ಅರಿವು ನೀಡಲಾಗುತ್ತದೆ. ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆಯಡಿ ಲಭ್ಯವಿರುವ ಕಾನೂನು ಪರಿಹಾರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು ಎಂದರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವೈ.ಸಿ.ಮನುಜಶ್ರೀ, ತಾಪಂ ಇಒ ವೀಣಾ, ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ಅಧಿಕಾರಿ ಕೋಮಲ್ ಕುಮಾರ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಶಿವಲಿಂಗಯ್ಯ, ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಿಕ್ಕಹುಚ್ಚಯ್ಯ, ಕಸ್ತೂರ ಬಾ ಗಾಂಧಿ ವೃದ್ಧಾಶ್ರಮದ ನಿರ್ದೇಶಕ ನಟರಾಜು, ನಾಲ್ವಡಿ ಕೃಷ್ಣರಾಜ ಒಡೆಯರ್ ಆಶ್ರಯ ದಾಮದ ನಿರ್ದೇಶಕ ಕುಮಾರ್ ಇತರರಿದ್ದರು.