ಮಂಡ್ಯದಲ್ಲಿ ಉಪ ಚುನಾವಣಾ ಆಯುಕ್ತ ಸಂಜಯ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
- ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಮುಗಿಸಿ
- ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ
ಮಂಡ್ಯ: ಜಿಲ್ಲೆಯಲ್ಲಿ ಎಸ್‌ಐಆರ್ ಮತದಾರರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ನಿಗದಿತ ಅವಧಿಯೊಳಗೆ ಪಾರದರ್ಶಕವಾಗಿ ಕಾರ್ಯವನ್ನು ನಿರ್ವಹಿಸುವಂತೆ ಉಪ ಚುನಾವಣಾ ಆಯುಕ್ತ ಸಂಜಯ್‌ಕುಮಾರ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯನಿರ್ವಹಣೆ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. ಈ ಪ್ರಕ್ರಿಯಲ್ಲಿ ಅರ್ಹರು ಮತದಾರರ ಪಟ್ಟಿಯಿಂದ ಕೈ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಎಲ್ಲ ಮತದಾರರ ನೋಂದಣಾಧಿಕಾರಿಗಳ ಜತೆ ಸಂವಹನ ನಡೆಸಿ ಕ್ಷೇತ್ರದ ಸಮಸ್ಯೆಗಳಿಗೆ ಸಭೆಯಲ್ಲಿ ಪರಿಹಾರ ಸೂಚಿಸಿದ ಅವರು, ಈಗಾಗಲೇ ಗುರುತಿಸಿರುವ ಬಿಎಲ್‌ಒ ಸೌಲಭ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಗಣಕೀಕರಣ ಮಾಡಲು ಎಲ್ಲ ರೀತಿಯ ಸಿದ್ಧತೆಗಳೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ. ಎನ್ಯುಮರೇಷನ್ ಅರ್ಜಿ ಭರ್ತಿ ಮಾಡಿಕೊಡುವಂತೆ ತಿಳಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಇತರರಿದ್ದರು.