ಮಂಡ್ಯದಲ್ಲಿ ಆಯೋಜಿಸಿದ್ದ ಕೌಶಲ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. 
ಮಂಡ್ಯ

ಯುವಜನತೆಗೆ ಕೌಶಲ ತರಬೇತಿ ಕೊಡಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಪ್ರಮುಖ ಮುಖ್ಯಾಂಶಗಳು

  • ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ
  • ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ನಾಗನಂದ ಸೇರಿದಂತೆ ಹಲವರು ಅಧಿಕಾರಿಗಳು ಭಾಗಿ
ಮಂಡ್ಯ: ಯುವಕ ಮತ್ತು ಯುವತಿಯರಿಗೆ ಅವರ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ ತರಬೇತಿ ಹಾಗೂ ಸ್ವ ಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕೌಶಲ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೌಶಲ ಅಭಿವೃದ್ಧಿ ತರಬೇತಿಗಳು ಇಂದಿನ ಯುವ ಜನತೆಗೆ ಅಗತ್ಯವಾಗಿದೆ. ಪ್ರಸಕ್ತ ಕೈಗಾರಿಕೆ ಹಾಗೂ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾಗಿರುವ ತರಬೇತಿಗಳನ್ನು ನೀಡಲು ಕ್ರಮ ವಹಿಸಬೇಕು. ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ತರಬೇತಿ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದರು.
ಯುವನಿಧಿ, ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲವನ್ನು ಯುವಕರಿಗೆ ಕಲಿಸಿ. ಜತೆಗೆ ಅವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಜಿಲ್ಲೆಯ ಯುವಕರಿಗೆ ಉದ್ಯೋಗದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೇರೆ ಬೇರೆ ಸಂಸ್ಥೆಗಳಿಂದ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ನೀಡುವಂತೆ ಮತ್ತು ಅಂಗವಿಕಲರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡಬೇಕು ಎಂದು ಹೇಳಿದರು.
ಸ್ವನಿಧಿ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಗೊಂಡು ಕೇಂದ್ರ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಯೋಜನೆಗಳ ಸಂಪರ್ಕ ಕಲ್ಪಿಸಬೇಕು. ಹಾಗೂ ಸದರಿ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ನಾಗನಂದ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.