ಯಲಾದಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಕದಲೂರು ಉದಯ್ ಭೂಮಿಪೂಜೆ ನೆರೆವೇರಿಸಿದರು.
- ಶಾಸಕ ಕೆ.ಎಂ.ಉದಯ್
- ಯಲಾದಹಳ್ಳಿ ಗ್ರಾಮ
ಕೆ.ಎಂ.ದೊಡ್ಡಿ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಯಾದರೆ ಗ್ರಾಮಗಳೂ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸಮೀಪದ ಯಲಾದಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು 1.5 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರೆವೇರಿಸಿ ಮಾತನಾಡಿದರು.ರಸ್ತೆಗಳು ಅಭಿವೃದ್ಧಿಯಿಂದ ಗ್ರಾಮಗಳಲ್ಲಿನ ಜಮೀಜು ಹಾಗೂ ನಿವೇಶನಗಳ ಮೌಲ್ಯಗಳು ದ್ವಿಗುಣಗೊಳ್ಳುತ್ತದೆ ಎಂದರು.
ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರದಿಂದ ವಿಶೇಷ ಅನುದಾನ ತಂದು ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲಾಗುತಿದ್ದು, ಗ್ರಾಮಸ್ಥರು ಸಹಕರಿಸಬೇಕು ಎಂದು ಮನವಿ ಮಾಡಿದರು.
ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸುವುದರ ಜತೆಗೆ, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುತ್ತಿದ್ದ ಸಂಚಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಸರ್ಕಾರ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಮೂಲ ಸೌಕರ್ಯ ಕಾಮಗಾರಿಗಳು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದರು.
ರಸ್ತೆ ಚರಂಡಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ನಿಗದಿತ ವೇಳೆಗೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ತಾಪಂ ಮಾಜಿ ಸದಸ್ಯ ದ್ಯಾವೇಗೌಡ, ಮುಖಂಡರಾದ ನಿಂಗೇಗೌಡ, ನಂಜುಂಡೇಗೌಡ, ನಾಡಗೌಡ ಕೃಷ್ಣ, ಬೋರೇಗೌಡ, ಪ್ರೇಮಕುಮಾರ್ ಇತರರಿದ್ದರು.