ಸರ್ಕಾರದ ವಿವಿಧ ಯೋಜನೆಗಳ ಪ್ರಚಾರ, ಸ್ವ-ಸಹಾಯ ಸಂಘಗಳ ಮರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸುವ ಸಂಬಂಧ ಮಳವಳ್ಳಿಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಸ್ಥಳ ಪರಿಶೀಲನೆ ನಡೆಸಿದರು. ರೂಪಶ್ರೀ, ಶ್ರೀಹರ್ಷ, ಶ್ರೀನಿವಾಸ್ ಇದ್ದರು.
- ಡಿ.15 ರಿಂದ 22
- ಶ್ರೀ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ
ಮಳವಳ್ಳಿ: ಪಟ್ಟಣದಲ್ಲಿ ಡಿ.15 ರಿಂದ 22ರವರೆಗೆ ಶ್ರೀ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದರು.
ಪಟ್ಟಣದ ಮೈಸೂರು ಮುಖ್ಯ ರಸ್ತೆಯ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ಸಿದ್ಧಗೊಳ್ಳುತ್ತಿರುವ ವೇದಿಕೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲು ಮಾಹಿತಿ ಕೇಂದ್ರ ಹಾಗೂ ಸ್ವ-ಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳನ್ನು ಮಾರಾಟ ಮಳಿಗೆಗಳನ್ನು ತೆರೆಯುವ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ತಿಳಿಸುವ 18 ಮಾಹಿತಿ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಇತರ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮಳಿಗೆಗಳನ್ನು ಸೂಕ್ತ ಸ್ಥಳದಲ್ಲಿ ತೆರೆಯಲು ಸ್ಥಳಾವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.
ಜಯಂತಿ ಮಹೋತ್ಸವ 7 ದಿನ ನಡೆಯಲಿದ್ದು, ಸ್ವ-ಸಹಾಯ ಸಂಘಗಳು ಉತ್ಪಾದಿಸುವ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಲು 25 ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಆ ಮೂಲಕ ಮಹಿಳಾ ಸ್ವ-ಸಹಾಯ ಸಂಘಗಳ ಆರ್ಥಿಕ ಬಲವರ್ಧನೆಗೆ ಕ್ರಮ ವಹಿಸಲಾಗಿದೆ ಎಂದರು.
ಇತ್ತೀಚೆಗೆ ವಿ.ಸಿ.ಫಾರ್ಮ್‌ನಲ್ಲಿ ನಡೆದ ಕೃಷಿ ಮೇಳದಲ್ಲಿ 35 ಮಾರಾಟ ಮಳಿಗೆಗಳನ್ನು ತೆರೆದು ಸ್ವ-ಸಹಾಯ ಸಂಘಗಳಿಗೆ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. 3 ದಿನಗಳ ಕಾಲ ನಡೆದ ಕೃಷಿ ಮೇಳದಲ್ಲಿ ಸ್ವ-ಸಹಾಯ ಸಂಘಗಳು ಒಟ್ಟು 17.50 ಲಕ್ಷ ರೂ. ವಹಿವಾಟು ಆಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಮೇಳ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಇಲ್ಲೂ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜಿಸಲಾಗಿದ್ದು, ಉತ್ತಮ ಉತ್ಪನ್ನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆ ಮೂಲಕ ಸ್ವ-ಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೂಪಶ್ರೀ, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ತಾಪಂ ಇಒ ಶ್ರೀನಿವಾಸ್ ಸೇರಿದಂತೆ ಇತರರು ಹಾಜರಿದ್ದರು.