ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಚೌಡಿಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವೀಕ್ಷಣೆ ಮಾಡಿದರು. ಕೃಷ್ಣೇಗೌಡ, ದೇವರಾಜು, ಮಹದೇವು, ಸೋಮಶೇಖರ್, ಚೌಡಪ್ಪ, ಬಸವರಾಜು ಇದ್ದರು.
ಮಳವಳ್ಳಿ: ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ವಿಶೇಷ ಆದ್ಯತೆ ನೀಡಿ ಮಾದರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದರು.
ತಾಲೂಕಿನ ದೇವಿಪುರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಚೌಡಿಕಟ್ಟೆಯನ್ನು ಸೋಮವಾರ ವೀಕ್ಷಣೆ ಮಾಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸುವುದರ ಜತೆಗೆ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಇದರ ಪರಿಣಾಮ ಖಾಸಗಿ ಶಾಲೆಗಳಿಗೂ ಮಿಗಿಲಾಗಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವಂತಾಗಿದೆ. ತಾಲೂಕಿನಲ್ಲಿ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಆರಂಭಿಸಲು ಪದವಿ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಚಾಲ್ತಿಯಲ್ಲಿದೆ ಎಂದು ಹೇಳಿದರು.
ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ, ಸ್ವಚ್ಛತೆ ಹಾಗೂ ರೋಗಿಯ ಹಾರೈಕೆಯಲ್ಲಿಯೂ ಸುಧಾರಣೆ ಕಂಡಿದೆ. ಹೆರಿಗೆ, ಮೂಳೆ, ಕಿವಿ, ಮೂಗು, ಗಂಟಲು, ಕಣ್ಣು ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆ ಸೌಲಭ್ಯಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುತ್ತಿದ್ದು, ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಿರುಗಾವಲು ಮತ್ತು ಕಸಬಾ ಹೋಬಳಿ ರೈತರ ಕೃಷಿಗೆ ಅನುಕೂಲವಾಗುವಂತೆ ನಾಲಾ ಆಧುನೀಕರಣಗೊಳಿಸಲಾಗಿದೆ. ತಾಲೂಕಿನ ಎಲ್ಲ ಗ್ರಾಮಗಳಿಗೂ ಕಾವೇರಿ ನೀರಿನ ಸೌಲಭ್ಯವನ್ನು ಕಲ್ಪಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಚೌಡಿ ಕಟ್ಟೆಯ ಮುಂದುವರಿದ ಅಭಿವೃದ್ಧಿ ಕಾಮಗಾರಿ ಜತೆಗೆ ಕಟ್ಟೆಯೊಳಗೆ ನಿರ್ಮಿಸುತ್ತಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಅನುದಾನ ನೀಡಬೇಕೆಂದು ದೇವಿಪುರ ಗ್ರಾಮದ ಮುಖಂಡರು ಮನವಿ ಮಾಡಿದರು. ಸಿಎಸ್‌ಆರ್ ಅನುದಾನದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಲು ಶ್ರಮಿಸಲಾಗುವುದು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಭರವಸೆ ನೀಡಿದರು.
ಮನ್‌ಮುಲ್ ನಿರ್ದೇಶಕ ಕೃಷ್ಣೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ದೇವರಾಜು, ಮುಖಂಡರಾದ ಮಹದೇವು, ಸೋಮಶೇಖರ್, ನಂಜಮ್ಮಣಿ, ಚೌಡಪ್ಪ, ಬಸವರಾಜು ಸೇರಿದಂತೆ ಇತರರು ಇದ್ದರು.