ಕಾಡುಕೊತ್ತನಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 2 ಕೋಟಿಗೂ ಅಧಿಕ ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿ ಪೂಜೆ ನೆರವೇರಿಸಿದರು
ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತೆ ಹೊಲ, ಗದ್ದೆಗಳಿಗೆ ತೆರಳುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಹರಳಹಳ್ಳಿ, ಕಡಿಲುವಾಗಿಲು, ಲಕ್ಷ್ಮೇಗೌಡನದೊಡ್ಡಿ, ಸಬ್ಬನಹಳ್ಳಿ, ಕಾಡುಕೊತ್ತನಹಳ್ಳಿ, ಭುಜಹಳ್ಳಿ ಹಾಗೂ ಕಪರೆಕೊಪ್ಪಲು ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 2 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ನಾನು ಶಾಸಕನಾದ ನಂತರ ಈಗಾಗಲೇ ಕ್ಷೇತ್ರಕ್ಕೆ ನಿರೀಕ್ಷೆಗೂ ಮೀರಿ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಹೊಲ ಗದ್ದೆಗಳಿಗೆ ತೆರಳುವ ರೈತರ ಅನುಕೂಲಕ್ಕಾಗಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದ್ದೇನೆ ಎಂದರು.
ವಿದ್ಯುತ್ ಖಾಸಗೀಕರಣ ಸಂಬಂಧ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಈ ಸಮಸ್ಯೆಯನ್ನು ಸಿಎಂ ಶೀಘ್ರ ಬಗೆಹರಿಸುತ್ತಾರೆ.
ಕೇವಲ 15 ದಿನಗಳ ಹಿಂದೆಯಷ್ಟೇ ತಹಸೀಲ್ದಾರ್ ವರ್ಗಾವಣೆಯಾಗಿದ್ದಾರೆ. ಈಗಷ್ಟೆ ಮುಖ್ಯಮಂತ್ರಿ ಹಾಗೂ ಮಂತ್ರಿ ಮಂಡಲ ಬದಲಾವಣೆಯಾಗಿದೆ. ಇನ್ನೂ ಒಂದು ವಾರದಲ್ಲಿ ಹೊಸ ತಹಸೀಲ್ದಾರ್ ಬರುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಮದ್ದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದೇಶ್, ಮುಖಂಡರಾದ ಕೆ.ಸಿ.ಮಹದೇವು, ಗೌಡಪ್ಪ, ಸ್ವಾಮಣ್ಣ, ದೇವರಾಜು, ಜಯರಾಜು, ಶಿವರುದ್ರಸ್ವಾಮಿ, ಚಂದ್ರು, ಜಯಕುಮಾರ್, ಪಾಪಣ್ಣ ಮತ್ತಿತರರು ಇದ್ದರು.