ಮಂಡ್ಯ ತಾಲೂಕು ಯಲಿಯೂರು ಗ್ರಾಮದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ಜಿ.ಪಂ ಸಿಇಒ ಕೆ.ಆರ್.ನಂದಿನಿ ಮಕ್ಕಳಿಗೆ ಬಾಳೆಹಣ್ಣು ವಿತರಿಸಿದರು.
- ಯಲಿಯೂರಿನಲ್ಲಿ ಅಕ್ಕರೆಯ ಅಂಗಳ ಉದ್ಘಾಟನೆ
- ಗ್ರಾಮ ಪಂಚಾಯಿತಿಯಿಂದ ವತಿಯಿಂದ ಆಯೋಜನೆ
ಮಂಡ್ಯ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 26ರವರೆಗೆ 8 ರಿಂದ 13 ವರ್ಷದೊಳಗಿನ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.
ತಾಲೂಕಿನ ಯಲಿಯೂರು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯಿತಿಯಿಂದ ವತಿಯಿಂದ ಆಯೋಜಿಸಿದ್ದ ಅಕ್ಕರೆಯ ಅಂಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಜಿ.ಪಂ., ತಾ.ಪಂ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯ 299 ಗ್ರಾಮ ಪಂಚಾಯಿತಿ ಮಟ್ಟದ ಅರಿವು ಕೇಂದ್ರಗಳ ಮೂಲಕ ಶಿಬಿರ ಆಯೋಜಿಸಲಾಗಿದೆ. ಬೇಸಿಗೆ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ವಿಶೇಷ ಆಟಗಳಿಗೆ ಒತ್ತು ನೀಡುವುದು ಶಿಬಿರದ ಉದ್ದೇಶವಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ನಾಯಕತ್ವ ಮತ್ತು ಸಂವಹನ ಕೌಶಲ ಅಭಿವೃದ್ಧಿಪಡಿಸುವುದು, ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಜಿಪಂ ಉಪ ಕಾರ್ಯದರ್ಶಿ(ಅಭಿವೃದ್ಧಿ) ಪಿ.ಲಕ್ಷ್ಮೀ, ತಾಪಂ ಇಒ ಲೋಕೇಶ್‌ಮೂರ್ತಿ, ದಕ್ಷಿಣ ವಲಯ ಬಿಇಒ ಮಹದೇವು ಇತರರಿದ್ದರು.