ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಪಂ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಂಗವಿಕಲರಿಗೆ ಚೆಕ್ ವಿತರಿಸಿದರು.
- ಅಂಗವಿಕಲರಿಗೆ ಸ್ವಯಂ ಉದ್ಯೋಗ
- ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಪಾಂಡವಪುರ: ಅಂಗವಿಕಲರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ತಾಲೂಕಿನ ಕ್ಯಾತನಹಳ್ಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಚೆಕ್ ಹಸ್ತಾಂತರ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು. ಪಂಚಾಯಿತಿ ವತಿಯಿಂದ ಸ್ವಂತ ಸಂಪನ್ಮೂಲ ಕ್ರೋಡೀಕರಿಸಿ, ಅದರಲ್ಲಿ ಶೇ.5ರಷ್ಟನ್ನು ಅಂಗವಿಕಲರಿಗೆ ನೀಡಲಾಗುತ್ತಿದೆ. ಅದಕ್ಕಾಗಿ ಪಂಚಾಯಿತಿಯವರಿಗೆ ಧನ್ಯವಾದ ಹೇಳುತ್ತೇನೆ. ಸ್ಥಳೀಯ ಸಂಪನ್ಮೂಲದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ನೆರವು ನೀಡಲಾಗುತ್ತಿದ್ದು, ಅದೇ ರೀತಿ ಪಂಚಾಯಿತಿಗೆ ಸರ್ಕಾರದಿಂದ ಹೆಚ್ಚು ಹಣ ಬಂದರೆ ಇನ್ನೂ ಹೆಚ್ಚು ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇವೆ ಎಂದರು.
ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಸರ್ಕಾರದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಸ್ಥಳೀಯ ಸಮಸ್ಯೆಗಳು ಬೆಂಗಳೂರಿನಲ್ಲಿರುವವರಿಗೆ ಗೊತ್ತಾಗುವುದಿಲ್ಲ. ಪಂಚಾಯಿತಿ ಮಟ್ಟದಲ್ಲಾದರೆ ಸಮಸ್ಯೆಗಳ ಬಗ್ಗೆ ಅರಿವು ಇರುತ್ತದೆ. ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಇಂತಹ ಕೆಲಸಗಳನ್ನು ಮಾಡಲು ಹೆಚ್ಚಿನ ಅನುದಾನ ನೀಡಬೇಕು. ಈ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
ಪ್ರತಿ ಮನೆಗೆ ಭೇಟಿ ನೀಡಿ ಎಷ್ಟು ಜನರು ಅಂಗವಿಕಲರಿದ್ದಾರೆ? ಅವರಿಗೆ ಬೇಕಿರುವ ಸವಲತ್ತುಗಳೇನು? ಇತ್ಯಾದಿ ಮಾಹಿತಿ ಸಂಗ್ರಹಿಸಲಾಗುವುದು. ಮೇಲುಕೋಟೆ ವಿಧಾನಸಭೆ ವ್ಯಾಪ್ತಿಯಲ್ಲಿರುವ ಅಂಗವಿಕಲರು ಸ್ವಯಂ ಉದ್ಯೋಗ ಕೈಗೊಳ್ಳಲು ಅಗತ್ಯ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಈ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದರು.