ಪಾಂಡವಪುರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಾಂಡವಪುರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಸಮರ್ಪಕವಾಗಿ ಕೈಗೊಳ್ಳಬೇಕು, ಮತದಾರರ ಹೆಸರು ಸೇರ್ಪಡೆ, ಹೆಸರು ಕೈಬಿಡುವಿಕೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇರಿದಂತೆ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ನಿಖರತೆ ಮತ್ತು ಪಾರದರ್ಶಕತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಿ ಅರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗಿಡದಂತೆ ಎಚ್ಚರಿಕೆ ವಹಿಸುವುದು ಹಾಗೂ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು.
ತರಬೇತಿ ಕಾರ್ಯಾಗಾರದಲ್ಲಿ ಬೂತ್ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿ ನಮೂನೆಗಳ ನಿರ್ವಹಣೆ, ಮತದಾರರ ಮಾಹಿತಿಯ ಪರಿಶೀಲನೆ, ಆನ್‌ಲೈನ್ ಸೇವೆಗಳ ಬಳಕೆ ಮತ್ತು ಚುನಾವಣಾ ಆಯೋಗದ ನಿರ್ದೇಶನಗಳ ಕುರಿತು ವಿವರವಾದ ತರಬೇತಿ ನೀಡಲಾಯಿತು.
ಈ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಸೀಲ್ದಾರ್ ಪ್ರಭಾ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಇದ್ದರು.