ರೈತ ಟಿ.ಜೆ.ನಾಗೇಶ್ 
ಮಂಡ್ಯ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಿಕ್ಕೇರಿ: ಸಮೀಪದ ತೇಗನಹಳ್ಳಿ ಗ್ರಾಮದಲ್ಲಿ ಭಾನುವಾರ ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ತೇಗನಹಳ್ಳಿ ಗ್ರಾಮದ ಟಿ.ಜೆ.ನಾಗೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. 4 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ರೈತ ನಾಗೇಶ್ ಬೇಸಾಯಕ್ಕಾಗಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 3 ಲಕ್ಷ ರೂ.ಸಾಲ ಪಡೆದಿದ್ದರು. ಜತೆಗೆ ಸುಮಾರು 7ಲಕ್ಷ ರೂ. ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದರು. ಸಕಾಲದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಭಾನುವಾರ ಮಧ್ಯಾಹ್ನ ಮನೆಯಲ್ಲೇ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. 
ವಿಷಯ ತಿಳಿದ ಕೂಡಲೇ ಕುಟುಂಬಸ್ಥರು ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಾಗೇಶ್‌ಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. 
ಮೃತರ ಪತ್ನಿ ಇಂದ್ರಮ್ಮ ನೀಡಿದ ದೂರಿನ ಮೇರೆಗೆ ಕಿಕ್ಕೇರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತರ ತೋಟದಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಿತು.