ಮಂಡ್ಯದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
- ಶೂನ್ಯ ಮಾನವ ದಿನಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗಮನಹರಿಸಿ
- ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ
ವಿಬಿ ಜಿ ರಾಮ್ ಜಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಲು ಆದ್ಯತೆ ನೀಡಬೇಕು. ಮುಖ್ಯವಾಗಿ ಶೂನ್ಯ ಮಾನವ ದಿನಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗಮನಹರಿಸಿ ಉದ್ಯೋಗ ಸೃಜನೆ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಪಿಡಿಒಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಸೂಚನೆ ನೀಡಿದರು.
ನಗರದ ಜಿಪಂ ಕಚೇರಿಯ ಮಿನಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಯಮಾನುಸಾರ ಕ್ರಿಯಾ ಯೋಜನೆ ಸಿದ್ಧಪಡಿಸಿ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಿ ಅಂತಿಮಗೊಳಿಸಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಅವುಗಳನ್ನು ಕೂಡಲೇ ಜಿಪಂ ಕಚೇರಿಯ ಗಮನಕ್ಕೆ ತರಬೇಕು. ಈ ಬಗ್ಗೆ ರಾಜ್ಯ ಕಚೇರಿಯೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಪರಿಹರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಯೋಜನೆಯ ಉದ್ದೇಶ, ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರು ಹಾಗೂ ಕೂಲಿ ಕಾರ್ಮಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಕೂಲಿ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಯಾವುದೇ ಕಾರ್ಮಿಕರಿಗೆ ವಿಳಂಬಕ್ಕೆ ಆಸ್ಪದವಿಲ್ಲದಂತೆ ತಕ್ಷಣ ಉದ್ಯೋಗ ಕಲ್ಪಿಸಬೇಕು. ನಿಗದಿಪಡಿಸಿರುವ ಮಾನವ ದಿನಗಳ ಗುರಿಗೆ ಅನುಗುಣವಾಗಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ ಯೋಜನೆಯ ಪ್ರಗತಿಯನ್ನು ಹೆಚ್ಚಿಸಬೇಕು. ಮುಂದಿನ ವಾರದಿಂದ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಯೋಜನೆ ಕುರಿತು ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಅರಿವು ಮೂಡಿಸುವ ಕಾರ್ಯಾಗಾರ ಆಯೋಜಿಸಬೇಕು. ಪಿಡಿಒ, ಡಿಇಒ, ವಿಬಿ ಜಿ ರಾಮ್ ಜಿ ಯೋಜನೆಯ ಅನುಷ್ಠಾನದಲ್ಲಿ ತೊಡಗಿರುವ ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಿದರು.
ಮಳೆಯ ಕೊರತೆಯಿಂದ ಕೊಳವೆ ಬಾವಿಗಳಲ್ಲಿ ಇಳುವರಿ ಕಡಿಮೆಯಾಗಿರುವುದರಿಂದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಅಂತಹ ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ ಸಿಇಒ, ಸರ್ಕಾರದ ನಿರ್ದೇಶನದಂತೆ ಇ-ಸ್ವತ್ತು ಅರ್ಜಿಯನ್ನು ನಿಗದಿತ ಕಾಲಮಿತಿಯೊಳಗೆ ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು. ಯಾವುದೇ ಸೂಕ್ತ ಕಾರಣಗಳಿಲ್ಲದೇ, ಅರ್ಜಿ ಹಿಂತಿರುಗಿಸುವಂತಿಲ್ಲ ಹಾಗೂ ಬಾಕಿ ಇಡುವಂತಿಲ್ಲ. ಅಂತಹ ಪ್ರಕರಣಗಳು ಕಂಡುಬಂದರೆ ನಿಯಮಾನುಸಾರ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸ್ವಚ್ಛ ಭಾರತ ಮಿಷನ್, ವಸತಿ ಯೋಜನೆಗಳು ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಲ್ಲಿ ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿಯನ್ನು ಸಾಧಿಸಲು ಅಗತ್ಯ ಕ್ರಮವಹಿಸಬೇಕು. ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟಗಳ ಆರ್ಥಿಕ ಚಟುವಟಿಕೆಗಳಿಗೆ ಸೂಕ್ತ ಸಹಕಾರ ನೀಡುವಂತೆ ಮತ್ತು ಅಗತ್ಯ ಮೇಲ್ವಿಚಾರಣೆ ನಡೆಸಬೇಕು. 2026-27ನೇ ಸಾಲಿಗೆ ವಿವಿಧ ಲೆಕ್ಕ ಶೀರ್ಷಿಕೆಗಳಡಿ ಸರ್ಕಾರದಿಂದ ಬಿಡುಗಡೆಯಾಗಿರುವ ವೇತನ ಮತ್ತು ವೇತನೇತರ ಅನುದಾನಗಳಿಗೆ ನಿಯಮಾನುಸಾರ ಕ್ರಿಯಾಯೋಜನೆ ಸಿದ್ದಪಡಿಸಿ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದು ಸರ್ಕಾರದ ಮಾರ್ಗಸೂಚಿಗಳಿಗನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಡಿಸೆಂಬರ್ 2026ರ ಅಂತ್ಯದೊಳಗಾಗಿ ವೆಚ್ಚ ಭರಿಸಬೇಕು. ಸಾಮಾಜಿಕ ಪರಿಶೋಧನೆ ಮತ್ತು ಆಂತರಿಕ ಲೆಕ್ಕ ಪರಿಶೋಧನಾ ವರದಿಗಳ ಆಧಾರದ ಮೇಲೆ ಅಡ್ಹಾಕ್ ಸಮಿತಿ ಸಭೆ ನಡೆಸಿ ಆಕ್ಷೇಪಣೆ ಹಾಗೂ ವಸೂಲಾತಿ ಕಂಡಿಕೆಗಳ ತೀರುವಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ(ಆಡಳಿತ) ಡಾ.ಶಿವಲಿಂಗಯ್ಯ, ಉಪಕಾರ್ಯದರ್ಶಿ(ಅಭಿವೃದ್ಧಿ) ಪಿ.ಲಕ್ಷ್ಮೀ, ಯೋಜನಾ ನಿರ್ದೇಶಕ ಸುಂದರ್‌ರಾಜ್, ಮುಖ್ಯ ಯೋಜನಾಧಿಕಾರಿ ಧನುಷ್, ಮುಖ್ಯಲೆಕ್ಕಾಧಿಕಾರಿ ಶ್ರೀನಿವಾಸ್ ನಾಯಕ್, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ ಸೇರಿದಂತೆ ತಾಪಂ ಇಒ ಇದ್ದರು.