ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ತಾಲೂಕು ಸೇರಿದಂತೆ ಜಿಲ್ಲೆಯ ಮಂಡ್ಯ ಮತ್ತು ಮದ್ದೂರು ತಾಲೂಕುಗಳ ಗ್ರಾಮೀಣ ಜನವಸತಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಪರಿಶೀಲಿಸಿದರು.
ತಾಲೂಕಿನ ಮರಳಗಾಲದ ಬಳಿ ನಡೆಯುತ್ತಿರುವ 51 ಜನ ವಸತಿ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಅವರು, ನೀರು ಶುದ್ಧೀಕರಣ ಘಟಕ ಸೇರಿದಂತೆ ವಿವಿಧ ಘಟಕಗಳ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಅಭಿಯಂತರರಿಂದ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದರು.
ಜಾಕ್ವೆಲ್ ಕಾಮಗಾರಿ ಪ್ರಾರಂಭಿಸಲು ಸೂಚನೆ: ತಾಲೂಕಿನ ಯೋಜನೆಯ ಪ್ರಮುಖ ಘಟಕವಾದ ಜಾಕ್ವೆಲ್ ನಿರ್ಮಾಣ ಕಾಮಗಾರಿ ಇನ್ನೂ ಪ್ರಾರಂಭವಾಗದಿರುವುದನ್ನು ಗಮನಿಸಿದ ಸಿಇಒ ಅವರು, ಈ ಕುರಿತು ನಿರಂತರವಾಗಿ ಅನುಸರಣೆ ನಡೆಸಿ, ಅಗತ್ಯ ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ಪಡೆಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ಮತ್ತು ಮದ್ದೂರು ತಾಲೂಕುಗಳ ಗ್ರಾಮೀಣ ಜನವಸತಿಗಳಿಗೆ ಕುಡಿಯುವ ನೀರು ಪೂರೈಸಲು ಕೈಗೆತ್ತಿಕೊಳ್ಳಲಾಗಿರುವ ಎರಡು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳು ನಿರೀಕ್ಷಿತ ಪ್ರಗತಿ ಸಾಧಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಪ್ರಮಾಣದ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಗುತ್ತಿಗೆ ಸಂಸ್ಥೆಗಳು ನಿಯೋಜಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಗುತ್ತಿಗೆ ನಿಯಮಗಳನ್ವಯ ಕ್ರಮ ಕೈಗೊಳ್ಳುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಶ್ರೀರಂಗಪಟ್ಟಣ, ಮಂಡ್ಯ ಮತ್ತು ಮದ್ದೂರು ತಾಲ್ಲೂಕುಗಳ ಮೂರು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರರು ಅಗತ್ಯ ಪ್ರಮಾಣದಲ್ಲಿ ಮಾನವ ಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ಹೆಚ್ಚಳ ಮಾಡಿ ಕಾಮಗಾರಿಗಳಿಗೆ ವೇಗ ನೀಡಬೇಕು. ಸಂಬಂಧಪಟ್ಟ ಅಭಿಯಂತರರು ಪ್ರತಿದಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಅದರ ಮಾಹಿತಿಯನ್ನು ವಾಟ್ಸಾಪ್ ಮೂಲಕ ಸಲ್ಲಿಸಬೇಕು ಎಂದು ಸಿಇಒ ಸೂಚನೆ ನೀಡಿದರು.
ಈ ಸಂದರ್ಭ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸೌಮ್ಯಾ, ಗಣೇಶ್ ಹೆಗಡೆ, ಮಧುಸೂದನ್, ಕಾಮಗಾರಿಗಳ ಗುತ್ತಿಗೆದಾರರ ಪ್ರತಿನಿಧಿಗಳು ಹಾಗೂ ಯೋಜನಾ ನಿರ್ವಹಣಾ ಸಲಹಾ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.