ಗೆಜ್ಜಲಗೆರೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಮನೆಗಳಿಗೆ ನೀರು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಚಾಲನೆ ನೀಡಿದರು. ಡಿ.ರಮೇಶ್, ಚಿಕ್ಕತಿಮ್ಮೇಗೌಡ, ಜಿ.ಪಿ.ಯೋಗೇಶ್, ಗುರು, ವೀರಪ್ಪ, ಮೋಹನ್ ಇದ್ದರು.
- ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಚಾಲನೆ
- ಸಮಸ್ಯೆ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ವ್ಯವಸ್ಥೆ
- ಅನಿದಿಷ್ಟಾವಧಿ ಧರಣಿಗೆ ಬೆಂಬಲ
ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮೂರ್ನಾಲ್ಕು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಟ್ಯಾಂಕರ್‌ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಸುಮಾರು 123 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಗುರುವಾರ ರಾತ್ರಿ ಆಗಮಿಸಿ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.
ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವುದರಿಂದ ಇದನ್ನು ಮನಗಂಡು ಎಚ್.ಡಿ.ಕುಮಾರಸ್ವಾಮಿ ಅವರು ಟ್ಯಾಂಕರ್‌ಗಳ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದು, ಗ್ರಾಮದ ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಧೈರ್ಯ ತುಂಬಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದ, ಬೋರ್‌ವೆಲ್ ಮೂರ್ನಾಲ್ಕು ದಿನಗಳಿಂದ ಕೆಟ್ಟು ಹೋಗಿದ್ದು, ಗ್ರಾಮದ ಜನತೆ ಸಾಕಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿರ್ವಹಣೆಯನ್ನು ತಾಲೂಕು ಅಥವಾ ಜಿಲ್ಲಾಡಳಿತ ಮಾಡಬೇಕು. ಅದು ಬಿಟ್ಟು ನಗರಸಭೆ ಅಧಿಕಾರಿಗಳು ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು ಜಿಲ್ಲಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದರು.
ಹೀಗಾಗಿ ಇಡೀ ಗ್ರಾಮಕ್ಕೆ ಕುಡಿಯುವ ನೀರು ಸೇರಿದಂತೆ ದಿನ ಬಳಕೆಗೆ ಬೇಕಾಗುವ ನೀರಿನ ವ್ಯವಸ್ಥೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಟ್ಯಾಂಕರ್‌ಗಳ ಮೂಲಕವೇ ಪೂರೈಸುವ ಭರವಸೆ ನೀಡಿದ್ದು, ಈಗಾಗಲೇ ಗ್ರಾಮಕ್ಕೆ ಎರಡು ಟ್ಯಾಂಕರ್‌ಗಳ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಗಿಯುವವರೆಗೂ ಜನತೆಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ರೈತ ನಾಯಕಿ ಸುನಂದಾ ಜಯರಾಮ್, ತಾ.ಪಂ.ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಮುಖಂಡರಾದ ಲಿಂಗಪ್ಪಾಜಿ, ಜಿ.ಎ.ಶಂಕರ್, ಗುರು, ವೀರಪ್ಪ, ಮೋಹನ್, ಚಂದ್ರಶೇಖರ್, ಶಿವನಂಜು, ಪ್ರತಾಪ್ ಇತರರು ಇದ್ದರು.