ಮಂಡ್ಯ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ನೀರೆರೆಯಲಾತು.  
ಮಂಡ್ಯ

ಗಿಡ ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್.ಸುಬ್ರಮಣ್ಯ ಕರೆ

ಮಂಡ್ಯ: ಗಿಡಗಳನ್ನು ನೆಡುವುದು ಎಷ್ಟು ಮುಖ್ಯವೋ, ಅದೇ ರೀತಿ ಪಾಲನೆ ಪೋಷಣೆ ಮಾಡುವುದು ತುಂಬಾ ಅವಶ್ಯಕ. ಗಿಡ ಮತ್ತು ಮರಗಳು ಭೂಮಿಯ ರಕ್ಷಾಕವಚವಾಗಿದೆ. ಗಿಡಗಳನ್ನು ಬೆಳೆಸುವುದರಿಂದ ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್.ಸುಬ್ರಮಣ್ಯ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಿಡಗಳು ನಮಗೆ ಉಸಿರಾಡಲು ಆಮ್ಲಜನಕ, ಶುದ್ಧ ಗಾಳಿ ಮತ್ತು ಉತ್ತಮ ಮಳೆಯನ್ನು ನೀಡುತ್ತವೆ. ಕೇವಲ ಸಸಿಗಳನ್ನು ನೆಡುವುದು ಮಾತ್ರವಲ್ಲದೆ, ಅವುಗಳು ಮರವಾಗುವವರೆಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಮಕ್ಕಳಗೆ ಪರಿಸರ ಮತ್ತು ಪ್ರಕೃತಿಯ ಪ್ರೇಮದ ಬೀಜವನ್ನು ಬಿತ್ತಬೇಕು. ಅಂತೆಯೇ ಜಾಗೃತಿ ಮೂಡಿಸಬೇಕು. ನಮ್ಮ ಮುಂದಿನ ಪೀಳಿಗೆಗೆ ನಮ್ಮ ಪರಿಸರ ಆಶ್ರಯ ತಾಣವಾಗಬೇಕು. ಪ್ರತಿ ಮನೆ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಪರಸರ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕ. ಮಕ್ಕಳಲ್ಲಿ ನೈಸರ್ಗಿಕ ಪರಿಸರ ಪ್ರೇಮದ ಬೀಜವನ್ನು ಬಿತ್ತುವಂತ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್, ಅಪರ ಜಿಲ್ಲಾ ನ್ಯಾಯಾಧೀಶೆ ಮಂಜುಳಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ರಘು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಂತ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ, ಪ್ರಧಾನ ಕಾರ್ಯದರ್ಶಿ ಬಿ.ಸತೀಶ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ ಇತರರಿದ್ದರು.