ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. 
ಮಂಡ್ಯ

ಜೂ.21ರಂದು ಪಿಇಎಸ್ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಕೆ.ಎನ್.ರಾಘವೇಂದ್ರ
ಮಂಡ್ಯ: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ ಜೂ.21ರಂದು 12ನೇ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಸಾಮೂಹಿಕ ಯೋಗ ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ವಸತಿ ನಿಲಯದ ನಿವಾಸಿಗಳು, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಹಿಳಾ ಸಂಘಟನೆಗಳು ಮತ್ತು ಯೋಗ ಸಂಸ್ಥೆಗಳು ಸೇರಿದಂತೆ 10,000ಕ್ಕೂ ಹೆಚ್ಚು ಜನರು ಭಾಗವಹಿಸುವಂತೆ ಸಿದ್ಧತೆ ಮಾಡಲು ಸೂಚಿಸಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ, ಕಾಲೇಜು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು. ಕಾರ್ಯಕ್ರಮವು ಯಶಸ್ವಿಯಾಗಲು ಯೋಗ ಶಿಕ್ಷಕರನ್ನು ಸಂಯೋಜಕರನ್ನಾಗಿ ನೇಮಿಸಿ. ಅಂದು ಭಾಗವಹಿಸುವವರಿಗೆ 2 ರಿಂದ 3 ದಿನಗಳ ಮುಂಚಿತವಾಗಿ ತರಬೇತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ, ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸುವಂತೆ ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಮಾತನಾಡಿ, ಆಯುಷ್ ಇಲಾಖಾ ಮಾರ್ಗಸೂಚಿಗಳ ಅನುಸಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಥಳ ನಿಗದಿ ಮಾಡುವುದು. ಯೋಗಾಭ್ಯಾಸಗಾರರನ್ನು ಸಜ್ಜುಗೊಳಿಸುವುದು. ಶಿಷ್ಠಾಚಾರದ ಪ್ರಕಾರ ಯೋಗಾಸನಗಳನ್ನು ಪೂರ್ವಭ್ಯಾಸ ಮಾಡಿಸುವುದರ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.