ಮಂಡ್ಯ ನಗರದ ಎಸ್.ಬಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಿದರು.
- ನಶಾ ಮುಕ್ತ ಯುವ ವಿಕಸಿತ ಭಾರತ ಕಾರ್ಯಕ್ರಮ
- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೈ ಭಾರತ್ ನಿಂದ ಆಯೋಜನೆ
ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಹೊಣೆಗಾರಿಕೆ ಯುವ ಸಮೂಹದ ಮೇಲಿದೆ. ಯುವಜನತೆ ಸದೃಢ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಆರೋಗ್ಯಕರ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಎಸ್.ಬಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೈ ಭಾರತ್(ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯ, ಪದವಿ ಪೂರ್ವ ಶಿಕ್ಷಣ ಇಲಾಖೆ, ಎಸ್.ಬಿ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ನಶಾ ಮುಕ್ತ ಯುವ ವಿಕಸಿತ ಭಾರತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ದೇಶದ ಅಮೂಲ್ಯ ಆಸ್ತಿ ಮತ್ತು ರಾಷ್ಟ್ರದ ಭವಿಷ್ಯ. ಅವರ ಶಕ್ತಿ ಹಾಗೂ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣದ ದಿಕ್ಕಿನಲ್ಲಿ ಬಳಸಿದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ. ಮಾದಕ ವ್ಯಸನ, ದುಶ್ಚಟಗಳು ಹಾಗೂ ಅನಾರೋಗ್ಯಕರ ಜೀವನಶೈಲಿಯಿಂದ ದೂರವಿದ್ದು, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಯುವಕರು ತಮ್ಮ ಸುತ್ತಮುತ್ತಲಿನ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಸಹಪಾಠಿಗಳಲ್ಲಿ ದುಶ್ಚಟಗಳಿಗೆ ಬಲಿಯಾಗುತ್ತಿರುವವರನ್ನು ಗುರುತಿಸಿ, ಅವರಿಗೆ ಜಾಗೃತಿ ಮೂಡಿಸಿ ಸರಿದಾರಿಗೆ ತರುವ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣವು ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿ ನಾಗರಿಕನ ಕರ್ತವ್ಯವೂ ಆಗಿದೆ. ಮನುಷ್ಯನ ಜೀವನ ಅತ್ಯಂತ ಅಮೂಲ್ಯವಾದದ್ದು. ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳಿಗೆ ಬಲಿಯಾಗದೆ, ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಿ ಶಿಕ್ಷಣ, ಸಾಹಿತ್ಯ ಹಾಗೂ ಉತ್ತಮ ಪುಸ್ತಕಗಳ ಅಧ್ಯಯನದ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಉತ್ತಮ ಚಿಂತನೆ ಮತ್ತು ಸಕಾರಾತ್ಮಕ ಮನೋಭಾವವೇ ಯಶಸ್ವಿ ಜೀವನದ ಅಡಿಪಾಯ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಜನತೆ ಯಾವುದೇ ಕಾರಣಕ್ಕೂ ಮಾದಕ ವ್ಯಸನ ಸೇರಿದಂತೆ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗಬಾರದು. ದೈಹಿಕ ಹಾಗೂ ಮಾನಸಿಕ ಒತ್ತಡ, ತಪ್ಪು ಸ್ನೇಹ ಬಳಗ ಮತ್ತು ಕುತೂಹಲದಿಂದ ಕೆಲವರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಾರೆ. ಅದರ ದುಷ್ಪರಿಣಾಮಗಳು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಆದ್ದರಿಂದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಆರ್ಥಿಕ ಹಾಗೂ ಸಾಮಾಜಿಕ ಹಾನಿಗಳ ಬಗ್ಗೆ ಯುವಜನತೆಯಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ, ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಎಸ್.ಶ್ರುತಿ ಇತರರಿದ್ದರು.