ಮಳವಳ್ಳಿ: ಪ್ರತಿಭೆಯ ಅನಾವರಣವೇ ಪ್ರತಿಭಾ ಕಾರಂಜಿ. ಎಲ್ಲ ಮಕ್ಕಳಲ್ಲೂ ಪ್ರತಿಭೆ ಇದೆ, ಅದನ್ನು ಗುರುತಿಸಿ, ಪ್ರೋತ್ಸಾಹಿಸುವುದೇ ಇಂತಹ ಕಾರ್ಯಕ್ರಮಗಳ ಉದ್ದೇಶ. ಮಕ್ಕಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು ಎಂದು ಯುನಿವರ್ಸಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಟಿ.ಎಂ.ಪ್ರಕಾಶ್ ತಳಗವಾದಿ ಕರೆ ನೀಡಿದರು.
ತಾಲೂಕಿನ ತಳಗವಾದಿ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಟಿ.ಕಾಗೇಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ವೇದಿಕೆ ಭಯವನ್ನು ಹೋಗಲಾಡಿಸುತ್ತದೆ. ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಗುರುತಿಸಿ, ಅದನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಮಕ್ಕಳು ಕನ್ನಡ ಭಾಷೆಯ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಶಾಲೆಗಳು ಉಳಿಯಬೇಕು. ಸರ್ಕಾರಿ ಶಾಲೆಗೆ ಹೆಚ್ಚು ಮಕ್ಕಳನ್ನು ದಾಖಲಾತಿ ಮಾಡಿಸಿದರೆ, ಮಕ್ಕಳ ಉನ್ನತ ವಿದ್ಯಾಭ್ಯಾಸ ಮತ್ತು ಉದ್ಯೋಗಕ್ಕೆ ದಾರಿಯಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಿಆರ್ಸಿ ವ್ಯಾಪ್ತಿಯ ನಿವೃತ್ತಿ ಹಾಗೂ ವರ್ಗಾವಣೆಗೊಂಡ ಶಿಕ್ಷಕರಾದ ಮಾರುತಿ, ಲತಾ, ಪುಟ್ಟಮ್ಮ ಅವರನ್ನು ಸನ್ಮಾನಿಸಲಾಯಿತು.
ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆ, ಕಂಠಪಾಠ, ಅಭಿನಯ ಗೀತೆ, ಚಿತ್ರಕಲೆ, ಕ್ಲೇ ಮಾಡೆಲಿಂಗ್ ಸೇರಿದಂತೆ ಹಲವಾರು ಸ್ಪರ್ಧೆಗಳು ಜರುಗಿದವು. ವಿಜೇತ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ರಾಜು, ಉಪಾಧ್ಯಕ್ಷ ಬಸವರಾಜು, ಮುಖಂಡರಾದ ಪಟೇಲ್ ಶಿವಣ್ಣ, ಸಂದೀಪ್, ನಾಗೇಶ್, ಉಪ ಪ್ರಾಂಶುಪಾಲ ನಿರಂಜನ್, ದೇವಿಪುರ ಶಾಲೆಯ ಮುಖ್ಯ ಶಿಕ್ಷಕ ಕಿರಣ್, ಸಹ ಶಿಕ್ಷಕರಾದ ಪದ್ಮಾವತಿ, ರಾಧಾ, ಸುಜಾತಾ, ರವಿ, ಚುಂಚಣ್ಣ, ರೂಪಾ ಇತರರು ಇದ್ದರು.