ಮಂಡ್ಯದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಮುಖ್ಯ ಯೋಜನಾಧಿಕಾರಿ ಧನುಷ್, ಉಪ ಕಾರ್ಯದರ್ಶಿ-1 ಡಾ.ಶಿವಲಿಂಗಯ್ಯ ಇತರರಿದ್ದರು. 
ಮಂಡ್ಯ

ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೂಚನೆ

ಮಂಡ್ಯ : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಅಂತೆಯೇ, ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ವೈಯಕ್ತಿಕ ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾಮಗಾರಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಪ್ರಗತಿ ಪರಿಶೀಲನೆ ಮಾಡಬೇಕು. ಅಂತೆಯೇ ಸ್ಥಳ ಪರಿಶೀಲನೆ, ತಾಂತ್ರಿಕ ಅನುಮೋದನೆ, ಭೂಸ್ವಾಧೀನ ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಆರಂಭಿಕ ಹಂತದಲ್ಲಿಯೇ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಮಾತ್ರವಲ್ಲದೆ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಆದರೂ ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೆಲ ಕಾಮಗಾರಿಗಳು ಆರಂಭವಾಗದಿರುವುದು ಗಂಭೀರ ವಿಚಾರ. ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಕಾಮಗಾರಿಗಳು ವಿಳಂಬ ಮಾಡಬಾರದು ಎಂದು ಎಚ್ಚರಿಸಿದರು.

ಮುಂದಿನ ಜನವರಿಯೊಳಗೆ ಎಲ್ಲ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ, ಪೂರ್ವಸಿದ್ಧತೆ ಪೂರ್ಣಗೊಳಿಸಲು ಕ್ರಮ ವಹಿಸಿ. ಕಾಮಗಾರಿಗಳ ಆದ್ಯತೆಗಳನ್ನು ಆರಂಭದಲ್ಲಿಯೇ ಅಂತಿಮಗೊಳಿಸಬೇಕು. ಆರು ತಿಂಗಳಿಗೊಮ್ಮೆ ಆದ್ಯತೆ ಬದಲಾಯಿಸುವುದರಿಂದ ಅನುಷ್ಠಾನದಲ್ಲಿ ಗೊಂದಲ ಉಂಟಾಗುತ್ತದೆ. ಅನುಮೋದಿತ ಕಾಮಗಾರಿಗಳ ಒಪ್ಪಂದ ಹಾಗೂ ಸಾಮಗ್ರಿ ಖರೀದಿ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ ಕಾಮಗಾರಿಗಳ ಅನುಷ್ಠಾನಕ್ಕೆ ಸಿದ್ಧರಾಗಬೇಕು ಎಂದು ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಬಿಡುಗಡೆಯಾಗುವ ಅನುದಾನವನ್ನು ಆರ್ಥಿಕ ವರ್ಷದ ಕೊನೆಯಲ್ಲಿ ತರಾತುರಿಯಿಂದ ವೆಚ್ಚ ಮಾಡುವ ಬದಲು, ನಿಗದಿತ ಉದ್ದೇಶಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನುದಾನ ವೆಚ್ಚ ಮಾಡುವುದಷ್ಟೇ ಅಭಿವೃದ್ಧಿಯ ಮಾನದಂಡವಲ್ಲ. ಬದಲಿಗೆ ಕಾಮಗಾರಿಗಳ ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ದೊರೆಯುವ ನೈಜ ಪ್ರಯೋಜನ ಮುಖ್ಯವಾಗಬೇಕು. ಈ ನಿಟ್ಟಿನಲ್ಲಿ ಪ್ರತಿ ಅಧಿಕಾರಿಯೂ ತಮ್ಮ ಇಲಾಖೆಯ ಜವಾಬ್ದಾರಿಯನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸಿರುವ ಅನುದಾನವನ್ನು ಸಕಾಲದಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವಸತಿ ಮತ್ತು ಕಲಿಕಾ ವಾತಾವರಣ ಕಲ್ಪಿಸಬೇಕು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯ ದೊರೆಯುವಂತೆ ಕ್ರಮ ವಹಿಸಬೇಕು. ಬಹುಮುಖ್ಯವಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ವಿವಿಧ ಇಲಾಖೆಗಳ ಕಾಮಗಾರಿಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರ ನೈಜ ಅಗತ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಒಂದೇ ಕಾಮಗಾರಿಗೆ ಎರಡು ಮೂಲಗಳಿಂದ ಅನುದಾನ ಬಳಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳ ಅಗತ್ಯತೆ, ಸ್ಥಳ ಲಭ್ಯತೆ ಹಾಗೂ ತಾಂತ್ರಿಕ ಅಂಶಗಳನ್ನು ಖಚಿತ ಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ವೇತನ, ಪಿಂಚಣಿ, ಗ್ರಾಚ್ಯುಟಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೆಚ್ಚ ಸೇರಿದಂತೆ ಬದ್ಧ ವೆಚ್ಚಗಳಿಗೆ ಅಗತ್ಯವಿರುವ ಅನುದಾನದ ಕುರಿತು ಪರಿಶೀಲಿಸಿ, ಹೆಚ್ಚುವರಿ ಅನುದಾನದ ಪ್ರಸ್ತಾವನೆಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ. ಖರೀದಿ ಪ್ರಕ್ರಿಯೆ ಹಾಗೂ ನಾಗರಿಕ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಪಾರದರ್ಶಕವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಶಾಲೆಗಳ ಉಪಕರಣ ಮತ್ತು ಸಾಮಗ್ರಿಗಳ ಖರೀದಿ, ಅನುದಾನ ಬಳಕೆ ಹಾಗೂ ಕಾಮಗಾರಿಗಳ ಪ್ರಗತಿಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ಸಲ್ಲಿಸಬೇಕು. ಅನುದಾನದ ಕೊರತೆಯಿಂದ ಅಪೂರ್ಣಗೊಂಡಿರುವ ಕಾಮಗಾರಿಗಳು ಹಾಗೂ ಹೆಚ್ಚುವರಿ ಅನುದಾನದ ಅಗತ್ಯವಿರುವ ಯೋಜನೆಗಳ ಪ್ರಸ್ತಾವನೆಗಳನ್ನು ಮುಂದಿನ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಪರಿಗಣಿಸುವಂತೆ ರಾಜ್ಯ ಮಟ್ಟಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಹಾಲಿನ ಬ್ಯಾಂಕ್ ಕಾರ್ಯಾರಂಭಕ್ಕೆ ಅಗತ್ಯವಿರುವ ಬಹುತೇಕ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಆಟೋಕ್ಲೇವ್ ಯಂತ್ರ, ಡೀಪ್ ಫ್ರೀಜರ್ ಸೇರಿದಂತೆ ಮೂರು ಪ್ರಮುಖ ಉಪಕರಣಗಳ ಕೊರತೆಯಿದ್ದು, ಅವುಗಳನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯ ಉಪಕರಣಗಳು ಲಭ್ಯವಾದಲ್ಲಿ ಹಾಲಿನ ಬ್ಯಾಂಕ್ ಸಂಪೂರ್ಣವಾಗಿ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುಷ್, ಉಪ ಕಾರ್ಯದರ್ಶಿ-1 ಡಾ.ಶಿವಲಿಂಗಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.