ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನದಲ್ಲಿ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಆದೇಶ ಪತ್ರವನ್ನು ಶಾಸಕ ಕೆ.ಎಂ.ಉದಯ್ ವಿತರಣೆ ಮಾಡಿದರು. ಶಿವಕುಮಾರ್ ಬಿರಾದಾರ್, ರಾಮಲಿಂಗಯ್ಯ, ಅರುಣ್‌ಕುಮಾರ್ ಇದ್ದರು. 
ಮಂಡ್ಯ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ

ಶಾಸಕ ಕೆ.ಎಂ.ಉದಯ್ ಸೂಚನೆ

ಮದ್ದೂರು: ಸರ್ಕಾರದ ವಿವಿಧ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಸಿದ್ಧರಿರಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಎಂ. ಉದಯ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಜನರ ಸಮಸ್ಯೆಗಳಿಗೆ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಅಧಿಕಾರಿಗಳು ಸಹ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ನಿಯಮಾನುಸಾರ ತ್ವರಿತವಾಗಿ ನಿರ್ವಹಿಸಬೇಕು. ಜನರ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿದ ಶಾಸಕರು, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವಂತೆ ತಾಕೀತು ಮಾಡಿದರು.

ಬಾಗಿಲಿಗೆ ಬಂತು ಸರ್ಕಾರ- ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯ ವಾಕ್ಯದೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾಸೇವಾ ಆಂದೋಲನಕ್ಕೆ ರಾಜ್ಯವ್ಯಾಪಿ ಚಾಲನೆ ನೀಡಿದ್ದು, ನಿಮ್ಮ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ನಡೆದಾಗ ನಿಮ್ಮ ಸಮಸ್ಯೆಗಳ ಬಗ್ಗೆ ಅರ್ಜಿ ನೀಡಿ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದರು.

ವಿವಿಧ ಪಿಂಚಣಿ ಯೋಜನೆ, ಪಹಣಿ ತಿದ್ದುಪಡಿ, ಪೋಡಿ ಆಂದೋಲನ, ಇ.ಸ್ವತ್ತು ಯೋಜನೆ, ಹೊಸ ಪಡಿತರ ಚೀಟಿ, ಖಾತೆ ಬದಲಾವಣೆ, ರೀ ಸರ್ವೇ, ಆರ್.ಟಿ.ಸಿ, ತಿದ್ದುಪಡಿ, ರಸ್ತೆ ಅಭಿವೃದ್ಧಿ, ಸರ್ಕಾರಿ ಶಾಲೆಗಳು, ಅಂಗನವಾಡಿ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ನೀಡಿ ಸಮಸ್ಯೆ ಬಗೆ ಹರಿಸಿಕೊಳ್ಳಬಹುದು ಎಂದರು.

ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ತಾಪಂ ಇಒ ರಾಮಲಿಂಗಯ್ಯ, ಸಿಡಿಪಿಒ ಅರುಣ್ ಕುಮಾರ್, ಟಿಎಚ್‌ಒ ಡಾ.ಎಸ್.ರವಿಶಂಕರ್, ತಾಲೂಕು ಅರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.