24 ಎನ್‌ಎಂಜಿ 06: ನಾಗಮಂಗಲ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭಷ್ಟಾಚಾರಕ್ಕೆ ಕಡಿವಾಣ ಹಾಕುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು. ಲೋಕೇಶ್, ಮೈಸೂರಿನ ನಾರಾಯಣ, ಮಂಜೇಗೌಡ, ಪ್ರಭುಲಿಂಗೇಗೌಡ, ಚಂದ್ರು, ಪುಟ್ಟಸ್ವಾಮಿ ಇತರರು ಇದ್ದರು.  
ಮಂಡ್ಯ

ತಾಲೂಕು ಕಚೇರಿ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ರೈತ ಸಂಘ, ಹಸಿರು ಸೇನೆ ಆಗ್ರಹ

ನಾಗಮಂಗಲ: ತಾಲೂಕಿನ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ರೈತರ ಮೂಲ ಭೂದಾಖಲೆಗಳನ್ನು ಕಸದ ತೊಟ್ಟಿಗೆ ಬಿಸಾಡಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆಯ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಿಂದ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಟಿ.ಮರಿಯಪ್ಪ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪಟ್ಟಣದ ತಾಲೂಕು ಆಡಳಿತಸೌಧದ ಮುಂಭಾದಲ್ಲಿ ಕೆಲಹೊತ್ತು ಧರಣಿ ನಡೆಸಿದ ವೇಳೆ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಮಾತನಾಡಿ, ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ರೈತರ ಯಾವುದೇ ಕೆಲಸ ಕಾರ್ಯಗಳು ಆಗಬೇಕೆಂದರೆ ಅಧಿಕಾರಿಗಳಿಗೆ ಲಂಚ ಕೊಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ನಕಲಿ ದಾಖಲೆ ಸೃಷ್ಟಿಸಿ ಸಾವಿರಾರು ಎಕರೆ ಸರ್ಕಾರಿ ಮತ್ತು ಗೋಮಾಳ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವುದನ್ನು ಲೋಕಾಯುಕ್ತ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ತಾಲೂಕು ಕಚೇರಿಯ ಆರ್‌ಆರ್‌ಟಿ ವಿಭಾಗದಲ್ಲಿ ರೈತರ 6 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿಯಿರುವುದನ್ನು ಪತ್ತೆ ಹಚ್ಚಿರುವ ಉಪಲೋಕಾಯುಕ್ತರು ಅಧಿಕಾರಿಗಳಿಗೆ ಛೀಮಾರಿ ಹಾಕಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ನಂತರವೂ ಇಲ್ಲಿನ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲವೆಂದರೆ ಆಡಳಿತ ವ್ಯವಸ್ಥೆ ಯಾವ ಮಟ್ಟದಲ್ಲಿದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಕೆರೆ, ಕಟ್ಟೆಗಳಿಗೆ ಬಾರದ ಹೇಮೆಕ್ಷೇತ್ರದ ಶಾಸಕರೇ ಜಲಸಂಪನ್ಮೂಲ ಸಚಿವರಾಗಿದ್ದರೂ ಕೂಡ ತಾಲೂಕಿನ ಕೆರೆ, ಕಟ್ಟೆಗಳಿಗೆ ಹೇಮಾವತಿ ನೀರು ತುಂಬಿಸಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆಯಾಗಿದ್ದರೂ ಈವರೆಗೆ ರೈತರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಹಾಗಾಗಿ ಬರಪೀಡಿತ ರೈತರಿಗೆ ಬೆಳೆ ವಿಮೆಯ ಪರಿಹಾರ ನೀಡಬೇಕು. ಎಲ್ಲ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಬೇಕು. ತಾಲೂಕಿನ ಕದಬಹಳ್ಳಿಯಲ್ಲಿ ಶಾಶ್ವತ ಕೊಬ್ಬರಿ ಖರೀದಿ ಕೇಂದ್ರ ಸ್ಥಾಪಿಸಬೇಕು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ರೈತರು ಡೇರಿಗಳಿಗೆ ಪೂರೈಸುವ ಪ್ರತಿ ಲೀಟರ್ ಹಾಲಿಗೆ 50 ರೂ. ನೀಡಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಡಾ.ಅಶೋಕ್ ಅವರ ಮೂಲಕ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಲೋಕೇಶ್ ಮಾತನಾಡಿದರು. ರೈತ ಮುಖಂಡರಾದ ಮೈಸೂರಿನ ನಾರಾಯಣ, ಮಂಜೇಗೌಡ, ಪ್ರಭುಲಿಂಗೇಗೌಡ, ಚಂದ್ರು, ಪುಟ್ಟಸ್ವಾಮಿ, ರಾಮಲಿಂಗೇಗೌಡ, ಸೊ.ಸಿ.ಪ್ರಕಾಶ್, ರವಿಕುಮಾರ್ ಇತರರು ಇದ್ದರು.

======