ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಅಹವಾಲು ಸ್ವೀಕರಿಸಿದರು. ಶಿವಕುಮಾರ್ ಬಿರಾದರ, ರಾಮಲಿಂಗಯ್ಯ, ಲಿಖಿತಾ ಇದ್ದರು. 
ಮಂಡ್ಯ

ನಿಡಘಟ್ಟದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಭೂಮಿ ಕೊಡಿ

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್ ಆಗ್ರಹ

ಮದ್ದೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುತ್ತಿದಾರೆ. ಆದರೆ, ಸಮರ್ಪಕವಾಗಿ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಎಂ.ಪ್ರಕಾಶ್ ಆರೋಪಿಸಿದರು.

ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿದರು.

ಆತಗೂರು ಗ್ರಾಮದಲ್ಲಿ ಹೋಬಳಿ ಮಟ್ಟದಲ್ಲಿ ಆಯೋಜಿಸಿದ್ದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ನಿಡಘಟ್ಟ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಭೂಮಿ ಕಲ್ಪಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಅರ್ಜಿಯ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಡಘಟ್ಟ ಗ್ರಾಮದಲ್ಲಿ ಎಲ್ಲ ಜನಾಂಗದವರು ಸೌಹಾರ್ದಯುತ ಜೀವನ ನಡೆಸುತ್ತಿದ್ದಾರೆ. ಒಂದೊಂದು ಜನಾಂಗಕ್ಕೂ ಸ್ಮಶಾನ ಭೂಮಿ ಕಲ್ಪಿಸಲಾಗಿದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಜನಾಂಗವಿದೆ. ಆದರೆ, ನಮಗೆ ಸ್ಮಶಾನ ಭೂಮಿ ಇಲ್ಲದೆ ಎಲ್ಲೆಂದರಲ್ಲಿ ಅಂತ್ಯಕ್ರಿಯೆ ಮಾಡುವಂತಹ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶೀಘ್ರವಾಗಿ ತಾಲೂಕು ಆಡಳಿತ ಸಾರ್ವಜನಿಕ ಸ್ಮಶಾನ ಭೂಮಿ ಕಲ್ಪಿಸಬೇಕು ಮತ್ತು ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮತ್ತೆ ಮುಜರಾಯಿ ಇಲಾಖೆಗೆ ಒಳಪಡಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗ ಗುರುತು ಮಾಡಬೇಕೆಂದು ಮನವಿ ಮಾಡಿದರು.

ಶೀಘ್ರವಾಗಿ ಸ್ಮಶಾನಕ್ಕೆ ತಾಲೂಕು ಆಡಳಿತ ಜಾಗ ಕಲ್ಪಿಸದೆ ಹೋದರೆ ಮುಂದಿನ ದಿನಗಳಲ್ಲಿ ಯಾರಾದರೂ ಮೃತಪಟ್ಟರೆ ತಾಲೂಕು ಕಚೇರಿ ಮುಂದೆ ಶವವಿಟ್ಟು ಹೋರಾಟ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಹಸೀಲ್ದಾರ್ ಶಿವಕುಮಾರ್ ಬಿರಾದಾರ ಮಾತನಾಡಿ, ನಿಡಘಟ್ಟ ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ತಾಲೂಕು, ಜಿಲ್ಲಾ ಮಟ್ಟದ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಾರ್ವಜನಿಕರು ಯಾವುದೇ ಇಲಾಖೆಯ ಸಮಸ್ಯೆಗಳನ್ನು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸವಲತ್ತು ಮತ್ತು ಸಮಸ್ಯೆಗಳ ಬಗ್ಗೆ ದೂರು ದಾಖಲಿಸಿದರೆ, ಸಂಬಂಧಪಟ್ಟ ಇಲಾಖೆಗೆ ಅರ್ಜಿಗಳನ್ನು ವರ್ಗಾಯಿಸಿ ನಿಮಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಲಾಗುವುದು ಎಂದರು.

ಈ ಪ್ರಜಾಸೇವೆ ಕಾರ್ಯಕ್ರಮ ಒಂದೆರಡು ದಿನಗಳಿಗೆ ಮಾತ್ರ ಸೀಮಿತವಾಗುವುದಿಲ್ಲ. ಪ್ರತಿ ಶನಿವಾರದಂದು ಹೋಬಳಿ ಮಟ್ಟ ಮುಗಿದ ಬಳಿಕ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗುತ್ತಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ 81 ಅರ್ಜಿಗಳು ಸಲ್ಲಿಕೆಯಾದವು. ಪಿಂಚಣಿ ಪ್ರಮಾಣ ಪತ್ರ, ಪಶು ಇಲಾಖೆ ವತಿಯಿಂದ ಬಿತ್ತನೆ ಬೀಜ ವಿತರಣೆ ಮಾಡಲಾಯಿತು. ತಾಪಂ ಇಒ ರಾಮಲಿಂಗಯ್ಯ, ಟಿಎಚ್‌ಒ ಡಾ.ರವಿಶಂಕರ್, ಬಿಇಒ ಧನಂಜಯ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಸಿಡಿಪಿಒ ಅರುಣ್ ಕುಮಾರ್, ಎಡಿಎಲ್‌ಆರ್ ಲಿಖಿತಾ, ಶಿರಸ್ತೇದಾರ್ ರಾಘವೇಂದ್ರ, ರಾಜಸ್ವ ನಿರೀಕ್ಷಕ ಮುರಳಿ ಇತರರು ಇದ್ದರು.