ಮದ್ದೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರೋಟರಿ ಸಂಸ್ಥೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಳಾಗಿದೆ ಎಂದು ರೋಟರಿ ಅಧ್ಯಕ್ಷ ಕದಲೂರು ಲೋಕೇಶ್ ತಿಳಿಸಿದರು.
ತಾಲೂಕಿನ ಕದಲೂರು ಗ್ರಾಮದ ಶ್ರೀ ಭೈರವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ರೋಟರಿ ಸಂಸ್ಥೆ ವತಿಯಿಂದ ಉಚಿತವಾಗಿ ನೋಟ್‌ಬುಕ್ ಹಾಗೂ ಶುಚಿ ಕಿಟ್ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಆರ್ಥಿಕ ಸಂಕಷ್ಟದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅಗತ್ಯ ಶೈಕ್ಷಣಿಕ ಪರಿಕರಗಳನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳು ದೊರೆತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಶಿಕ್ಷಣಕ್ಕೆ ನೆರವಾಗುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದರು.
ರೋಟರಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಮಾಜಿ ಅಧ್ಯಕ್ಷ ಚನ್ನಂಕೇಗೌಡ, ಮಧುಕುಮಾರ್, ವಿಜಯ್, ಮಧು, ಸುರೇಶ್, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.