ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜಿ. ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ಸದಸ್ಯ, ಭಾರತೀ ವಿದ್ಯಾ ಸಂಸ್ಥೆಯ ಚೇರ‌್ಮನ್ ಮಧು ಜಿ.ಮಾದೇಗೌಡ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಡಾ.ಬಿ.ಆರ್.ಚಂದನ್, ಬಿ.ಎಂ.ನಂಜೇಗೌಡ, ಡಾ.ಸಿ. ಸುಮಿತಾ, ಡಾ.ನೂತನ್, ಪ್ರೊ.ಪ್ರಶಾಂತ್, ಡಾ.ವಿದ್ಯಾ ಇತರರು ಇದ್ದರು.  
ಮಂಡ್ಯ

ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಅರಿವು ಅಗತ್ಯ

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಹೇಳಿಕೆ

ಕೆ.ಎಂ.ದೊಡ್ಡಿ: ಗ್ರಾಮೀಣ ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ವೃದ್ಧಿಗೆ ಜಿ. ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯ ಉಚಿತ ಲ್ಯಾಪ್‌ಟಾಪ್ ವಿತರಿಸುವ ಮೂಲಕ ವಿನೂತನ ಹೆಜ್ಜೆ ಇಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ವಿದ್ಯಾ ಸಂಸ್ಥೆಯ ಚೇರ‌್ಮನ್ ಮಧು ಜಿ.ಮಾದೇಗೌಡ ತಿಳಿಸಿದರು.

ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜಿ. ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯದಿಂದ ಉಚಿತ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಅರಿವು ಮೂಡಿಸಲು ಸಂಸ್ಥೆಯಿಂದ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಅತ್ಯಗತ್ಯವಾಗಿದ್ದು, ಪ್ರಯೋಗಾಲಯದಲ್ಲಿರುವ ಕಂಪ್ಯೂಟರ್‌ಗಳನ್ನು ವರ್ಷದಲ್ಲಿ ಕೆಲವೇ ಗಂಟೆಗಳ ಕಾಲ ಬಳಸುವ ಅವಕಾಶ ಸಿಗುವುದರಿಂದ ನಿರೀಕ್ಷಿತ ಮಟ್ಟದ ತಾಂತ್ರಿಕ ಪರಿಣತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಕಂಪ್ಯೂಟರ್ ಬಳಕೆ ಮಾಡುವಂತಾಗಬೇಕು, ಪ್ರತಿಯೊಬ್ಬರ ಬಳಿಯೂ ಸ್ವಂತ ಲ್ಯಾಪ್‌ಟಾಪ್ ಇರಬೇಕು ಎಂಬ ಆಶಯದಿಂದ ಈ ಯೋಜನೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷವೇ ವಿದ್ಯಾರ್ಥಿಗಳು ಹಾಗೂ ಪಾಲಕರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿತ್ತು. ಆಗ ಅನೇಕ ಪಾಲಕರು ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನೇ ಭರಿಸುವುದು ಕಷ್ಟವಾಗಿರುವ ಸಂದರ್ಭದಲ್ಲಿ ದುಬಾರಿ ಲ್ಯಾಪ್‌ಟಾಪ್ ಖರೀದಿಸುವುದು ಮತ್ತಷ್ಟು ಹೊರೆಯಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದರು. ಇದನ್ನು ಮನಗಂಡ ಸಂಸ್ಥೆಯು ಗ್ರಾಮೀಣ ಭಾಗದ ಬಡವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

ಸಂಸ್ಥೆಯು ವಿದ್ಯಾರ್ಥಿಗಳಿಂದ ಮ್ಯಾನೇಜ್‌ಮೆಂಟ್ ಶುಲ್ಕವನ್ನು ಪಡೆಯದೆ, ಕೇವಲ ಸಿಇಟಿ ಶುಲ್ಕ ಮಾತ್ರ ಪಡೆಯುತ್ತಿದೆ. ಸಂಸ್ಥೆಗೆ ಆರ್ಥಿಕ ನಷ್ಟವಾದರೂ ಪರವಾಗಿಲ್ಲ, ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ಸದುದ್ದೇಶದಿಂದ ಪ್ರಾಯೋಗಿಕವಾಗಿ ಈ ವರ್ಷದಿಂದ ಲ್ಯಾಪ್‌ಟಾಪ್ ವಿತರಣೆ ಆರಂಭಿಸಲಾಗಿದೆ. ಈಗಾಗಲೇ 40 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಪ್ರಥಮ ವರ್ಷದಲ್ಲಿ ಪಾವತಿಸುವ ಶುಲ್ಕದಲ್ಲಿ ಸುಮಾರು 50 ಸಾವಿರ ರೂ.ಗಳನ್ನು ಲ್ಯಾಪ್‌ಟಾಪ್‌ಗಾಗಿ ವಿನಿಯೋಗಿಸಲಾಗುತ್ತಿದೆ. ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್ ನೀಡುವುದರ ಜತೆಗೆ ನಾಲ್ಕು ವರ್ಷಗಳ ವಾರಂಟಿ ಸೌಲಭ್ಯವನ್ನೂ ಒದಗಿಸಲಾಗಿದೆ. ಸಂಸ್ಥೆಯ ಕಡೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಅಗತ್ಯವಾದ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಲ್ಯಾಪ್‌ಟಾಪ್ ಮೂಲಕ ಹೆಚ್ಚಿನ ಜ್ಞಾನ ಸಂಪಾದಿಸಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಆರ್.ಚಂದನ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಟ್ಟು 224 ಇಂಜಿನಿಯರಿಂಗ್ ಕಾಲೇಜುಗಳಿದ್ದು, ಅವುಗಳ ಪೈಕಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಮೂಲಕ ತಾಂತ್ರಿಕ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಜಿ.ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯವೂ ಒಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಕಂಪ್ಯೂಟರ್ ತಂತ್ರಜ್ಞಾನದ ಬಗ್ಗೆ ಆಳವಾದ ಜ್ಞಾನ ಪಡೆದುಕೊಳ್ಳಬೇಕು ಹಾಗೂ ಅವರ ಮುಂದಿನ ಭವಿಷ್ಯ ಉಜ್ವಲವಾಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಲ್ಯಾಪ್‌ಟಾಪ್‌ಗಳ ಮೂಲಕ ಗೂಗಲ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರೆ ತಮ್ಮ ಜ್ಞಾನ ಮತ್ತು ಕೌಶಲ ವೃದ್ಧಿಸಿಕೊಳ್ಳಲು ಸಾಧ್ಯವಾಗಲಿದ್ದು, ತಂತ್ರಜ್ಞಾನ ಆಧಾರಿತ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಉಪಯುಕ್ತವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ಸಿ. ಸುಮಿತಾ, ಡಾ.ನೂತನ್, ಪ್ರೊ.ಪ್ರಶಾಂತ್, ಡಾ.ವಿದ್ಯಾ ಇತರರು ಇದ್ದರು.