ಮದ್ದೂರು: ರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯೇ ಜನರ ಬಳಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಪ್ರಜಾಸೇವಾ ಆಂದೋಲನ ಸದುಪಯೋಗ ಪಡೆದುಕೊಳ್ಳಬೇಕು. ಅಧಿಕಾರಿಗಳು ಬಂದ ಅರ್ಜಿಗಳನ್ನು ತ್ವರಿತವಾಗಿ ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.
ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿರುವವರು ಅದನ್ನು ತಾವಾಗಿಯೇ ತೆರವುಗೊಳಿಸಬೇಕು. ಸಾರ್ವಜನಿಕರು ತಮ್ಮ ನ್ಯಾಯಬದ್ಧ ಜಮೀನುಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದು. ಆದರೆ, ಸರ್ಕಾರಿ ಜಾಗವನ್ನು ತಮ್ಮದೆಂದು ಹೇಳಿಕೊಂಡು ಹಕ್ಕು ಪಡೆಯಲು ಮುಂದಾಗಬಾರದು ಎಂದು ಎಚ್ಚರಿಸಿದರು.
ಸೂಳೆಕೆರೆಯ ಸುಮಾರು 300 ಎಕರೆ ಪ್ರದೇಶ ಒತ್ತುವರಿಯಾಗಿದ್ದು ಇದನ್ನು ತೆರವುಗೊಳಿಸುವ ಮೂಲಕ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಕೆರೆಗಳ ಒತ್ತುವರಿ ತೆರವುಗೊಳಿಸುವುದರಿಂದ ರೈತರಿಗೆ ಶಾಶ್ವತವಾಗಿ ನೀರಿನ ಅನುಕೂಲ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.
ಸರ್ಕಾರಿ ಆಸ್ತಿಯನ್ನು ಒತ್ತುವರಿ ಮಾಡಿಕೊಂಡರೆ ಅದು ಮುಂದೊಂದು ದಿನ ಸಮಸ್ಯೆಯಾಗುತ್ತದೆ. ಹಿಂದೆ ತಂತ್ರಜ್ಞಾನದ ಕೊರತೆಯಿಂದ ಭೂಮಿಯ ಗಡಿ ಗುರುತಿಸುವುದು ಕಷ್ಟವಾಗಿತ್ತು. ಆದರೆ, ಈಗ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದು ಭೂಮಿಯ ದಾಖಲೆಗಳು ಮತ್ತು ಗಡಿಗಳನ್ನು ಸುಲಭವಾಗಿ ಪರಿಶೀಲಿಸಲು ಸಾಧ್ಯವಿದೆ. ಆದ್ದರಿಂದ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಳ್ಳುವ ಪ್ರಯತ್ನ ಮಾಡಬಾರದು ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಶಿವಕುಮಾರ್ ಬಿರಾದಾರ, ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ್, ಸಿಡಿಪಿಒ ಅರುಣ್ ಕುಮಾರ್, ಟಿಎಚ್ಒ ಡಾ.ರವಿಶಂಕರ್, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದ್ ಉಪಸ್ಥಿತರಿದ್ದರು.