Gavel on desk. Isolated with good copy space. Dramatic lighting. 
ಜಿಲ್ಲೆ

ಆರು ವರ್ಷದ ಬಾಲಕಿಗೆ ಲೈಂಗಿಕ ಹಲ್ಲೆ ಅಪರಾಧ ಸಾಬೀತು, 5 ವರ್ಷ ಕಠಿಣ ಶಿಕ್ಷೆ

ಹರೀಶ ಎಂ.

ಮಂಗಳೂರು: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ಹಲ್ಲೆಯ ಆರೋಪ ಸಾಬೀತಾಗಿದ್ದು, ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ನ್ಯಾಯಾಲಯದ ತೀರ್ಪು ನೀಡಿದೆ.

ಅರ್ಕುಳ ಗ್ರಾಮದ ಮೇರಮಜಲು ನಿವಾಸಿ ಧರ್ಮಣ ಪೂಜಾರಿ (40) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ಹಿನ್ನೆಲೆ: ಬಂಟ್ವಾಳ ಮೂಡಾಗ್ರಾಮದ ತಲಪಾಡಿ ಎಂಬಲ್ಲಿ ಬಾಡಿಗೆ ಕೊಠಡಿಯಲ್ಲಿ ಟೈಲರ್ ವೃತ್ತಿ ನಿರ್ವಹಿಸುತ್ತಿದ್ದ ಧರ್ಮಣ ಪೂಜಾರಿ 2027 ಜು.8ರಂದು 6 ವರ್ಷದ ಬಾಲಕಿ ಚಾಕಲೇಟ್ ತರಲೆಂದು ಅಂಗಡಿಗೆ ಹೋಗಿದ್ದ ವೇಳೆ ಅಪರಾಧಿ ಪುಸಲಾಯಿಸಿ ಟೈಲರ್ ಅಂಗಡಿ ಒಳಕ್ಕೆ ಕರೆದು ಲೈಂಗಿಕ ಹಲ್ಲೆ ನಡೆಸಿದ್ದ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ಅಭಿಯೋಜನೆ ಪರ ಒಟ್ಟು 9 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿದೆ. 19 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಕರಣದ ಸಾಕ್ಷೃ ದಾಖಲೆಗಳು, ಪೂರಕ ಸಾಕ್ಷೃ ಹಾಗೂ ವಾದ ಪ್ರತಿವಾದ ಆಲಿಸಿ ಜ.17ರಂದು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ತೀರ್ಪು ಪ್ರಕಟಿಸಿದ್ದಾರೆ.

ಅಪರಾಧಿಗೆ ಲೈಂಗಿಕ ಹಲ್ಲೆ ನಡೆಸಿರುವುದಕ್ಕಾಗಿ ಕಲಂ 10 ಪೊಕ್ಸೋ ಕಾಯ್ದೆಯಂತೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಛಿಸಿದೆ. ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಲಂ 396ರ ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶನ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.