ಜಿಲ್ಲೆ

ಪ್ರದೀಪ ಕುಮಾರ ಕಲ್ಕೂರಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ನ.11ರಂದು ಕದ್ರಿ ದೇವಳದಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಜಿಲ್ಲೆಯ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ರಂಗದ ಸಾಧಕರು ಮತ್ತು ಯಕ್ಷಗಾನ ಕಲಾಪೋಷಕರಿಗಾಗಿ ನೀಡುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಎಸ್. ಪ್ರದೀಪ ಕುಮಾರ್ ಕಲ್ಕೂರ ಅವರನ್ನು ಆಯ್ಕೆ ಮಾಡಲಾಗಿದೆ.

ಕಲ್ಕೂರ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಮ್ಮ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಎಡೆಬಿಡದೆ ಮಾಡಿದ ಹಲವು ಸೇವಾ ಕಾರ್ಯಗಳಿಗಾಗಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.

ನ.11ರಿಂದ 17ರ ವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆಯುವ 12ನೇ ವರ್ಷದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ದ್ವಾದಶ ಸರಣಿಯ ಸಂದರ್ಭ ನ. 11 ರಂದು ಪ್ರದೀಪ ಕುಮಾರ್ ಕಲ್ಕೂರರು ಯಕ್ಷಾಂಗಣದ ರಾಜ್ಯೋತ್ಸವ ಗೌರವ ಸ್ವೀಕರಿಸುವರು.