ಮಾನ್ವಿ: ಪೋಲಿಯೋ ಅಭಿಯಾನದಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ಮನೆಮನೆಗೆ ತೆರಳಿ ನಿಗದಿತ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಬೇಕೆಂದು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಫೆ.27ರಂದು ಲಸಿಕೆ ಹಾಕಲಾಗುವುದು. ಮಕ್ಕಳಿಗೆ ಪಾಲಕರು ತಪ್ಪದೆ ಲಸಿಕೆ ಹಾಕಿಸಬೇಕು ಎಂದರು. ತಾಲೂಕಿನಲ್ಲಿ ಬಾಲ ಕಾರ್ಮಿಕತೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು. ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಬೇಕು. ತಾಲೂಕು ಮತ್ತು ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕೆಂದು ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಚಂದ್ರಶೇಖರಯ್ಯಸ್ವಾಮಿ ಮಾತನಾಡಿ, ಲಸಿಕೆ ಕಾರ್ಯಕ್ರಮಕ್ಕೆ ಬೇಕಾದ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ. ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಹಾಕಲಾಗುವುದು ಎಂದರು. ಪುರಸಭೆ ನೌಕರ ಕೃಷ್ಣಮೂರ್ತಿ, ಸಿಡಿಪಿ ಕಚೇರಿ ಉದ್ಯೋಗಿ ವಿಜಯಲಕ್ಷ್ಮೀ, ಸುದರ್ಶನ್ ಇತರರು ಇದ್ದರು.