ಮಾನ್ವಿ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದಿಂದ ಫೆ. 19 ರಂದು ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಅಧಿಕಾರಿಗಳು ಮತ್ತು ಸಂಘ, ಸಂಸ್ಥೆಯವರು ಸಹಕಾರ ನೀಡಬೇಕು ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಮಹಿಳಾ ಸಮ್ಮೇಳನದ ಅಂಗವಾಗಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಬುಧವಾರ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದುವರೆಗೆ ಮಹಿಳೆಯರಿಗಾಗಿಯೇ ಪ್ರತ್ಯೇಕ ಸಾಹಿತ್ಯ ಸಮ್ಮೇಳನ ಆಯೋಜಿಸಿಲ್ಲ ಎಂದರು.
ಕಾರ್ಯಕ್ರಮಕ್ಕೆ ಬರುವ ಮಹಿಳೆಯರಿಗೆ ಸರ್ಕಾರದ ವಿವಿಧ ಇಲಾಖೆಗಳ ಬಗ್ಗೆ ಮಾಹಿತಿ ನೀಡುವ ಮಳಿಗೆಗಳನ್ನು ಹಾಕಬೇಕು. ಬಸವ ವೃತ್ತದಿಂದ ವಾಸವಿ ಕಲ್ಯಾಣ ಮಂಟಪದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಪುರಸಭೆಯಿಂದ ರಸ್ತೆಯಲ್ಲಿ ಸ್ವಚ್ಛತೆ ಕೈಗೊಳ್ಳಬೇಕು. ಪಟ್ಟಣದ ಎಲ್ಲ ವೃತ್ತಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ದೀಪಾಲಂಕರ ಮಾಡಿಸುವಂತೆ ಪುರಸಭೆ ಮುಖ್ಯಧಿಕಾರಿ ಗಂಗಾಧರಗೆ ಸೂಚಿಸಿದರು.