ಜಿಲ್ಲೆ

ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯ

ಆರ್.ಕೃಷ್ಣ

ಮೈಸೂರು: ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದು ಬಸ್ ನಂಜನಗೂಡು ಹೆದ್ದಾರಿಯ ಗುಂಡೂರಾವ್ ನಗರದ ಬಳಿ ಸೋಮವಾರ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದೆ ಇದ್ದ ಬಸ್ ಲಾರಿಗೆ ಡಿಕ್ಕಿ ಹೊಡೆಯಿತು. ಇದರಿಂದ ಬಸ್‌ನ ಮುಂಭಾಗದಲ್ಲಿದ್ದ ಐದಾರು ಜನರಿಗೆ ಗಾಯಗಳಾಗಿವೆ. ಬಸ್‌ನ ಮುಂಭಾಗ ಜಖಂಗೊಂಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಂಚಾರ ಸುಗಮಗೊಳಿಸಿದರು.