ಬೆಳ್ತಂಗಡಿ: ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪ್ರೋಕ್ಷಣೆ, ಮಂತ್ರಾಕ್ಷತೆಯೊಂದಿಗೆ ಸಂಪನ್ನಗೊಂಡಿತು.
ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್ ಸೇರಿದಂತೆ ಮೊಕ್ತೇಸರರು, ಭಕ್ತರು ಭಾಗವಹಿಸಿದ್ದರು.
ತುಲಾಭಾರ ಸೇವೆ, ಚೂರ್ಣೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪಲ್ಲಪೂಜೆ, ಮಹಾಅನ್ನಸಂತರ್ಪಣೆ ನಡೆಯಿತು. ರಾತ್ರಿ ಬಲಿ ಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವ-ದೇವರ ಭೇಟಿ, ಧ್ವಜಾರೋಹಣ ಜರುಗಿತು. ಸಾಂಸ್ಕೃತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಕಲ್ಲಡ್ಕ ವಿಠಲ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ನಡೆಯಿತು.
ಸಂಜೆ ಆಶ್ಲೇಷ ಬಲಿ, ಶ್ರೀಭೂತಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಸಾಂಸ್ಕೃತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಂದ ತುಳುನಾಡ ಪೊರ್ಲು ಕಾರ್ಯಕ್ರಮ, ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಧ್ವಜಾವರೋಹಣ, ಸಂಜೆ ದೊಡ್ಡ ರಂಗಪೂಜೆ, ಭಜನಾ ಕಾರ್ಯಕ್ರಮ, ಬಲಿ ಉತ್ಸವ, ವ್ಯಾಘ್ರಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಸಾಂಸ್ಕೃತಿಕ ವೇದಿಕೆಯಲ್ಲಿ ನಮ್ಮ ಕಲಾವಿದೆರ್ ಬೆದ್ರ ತಂಡದ ಉಮೇಶ್ ಮಿಜಾರ್ ಬಳಗದಿಂದ ತೆಲಿಕೆದ ಗೊಂಚಿಲ್ ಕಾರ್ಯಕ್ರಮ ನಡೆಯಿತು.