ಮಸ್ಕಿ: ಡಾ.ಬಿ.ಆರ್ ಅಂಬೇಡ್ಕರ್ ಅಸಮಾನತೆ ಮತ್ತು ಅನ್ಯಾಯಗಳನ್ನು ಸ್ವತಃ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಅಸಮಾನತೆ ಮತ್ತು ಅನ್ಯಾಯ ನಿವಾರಣೆಗೆ ಮಾದರಿಯಾದ ಸಂವಿಧಾನ ನೀಡಿದ್ದಾರೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಛಲವಾದಿ ಮಹಾಸಭಾ ಗ್ರಾಮ ಘಟಕದಿಂದ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನುಭವ, ಅಧ್ಯಯನದ ಮೂಲಕ ದೇಶದ ಜನರಿಗೆ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ದೂರದೃಷ್ಠಿ ಹೊಂದಿರುವ ಸಂವಿಧಾನ ರಚಿಸಿದ್ದಾರೆ ಎಂದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಅಸ್ಪಶ್ಯತೆ ಮತ್ತು ಅಸಮಾನತೆ ವಿರುದ್ಧ ಹೋರಾಡಿದ ನೇತಾರ ಅಂಬೇಡ್ಕರ್ ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದಾರೆ. ಅಂಬೇಡ್ಕರ್ ರಚಿತ ಸಂವಿಧಾನದಡಿ ನಾವೆಲ್ಲ ಜೀವನ ಕಟ್ಟಿಕೊಳ್ಳಬೇಕಾಗಿದೆ ಎಂದು ಹೇಳಿದರು.