ಮಸ್ಕಿ: ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಯ ಪರಾಮರ್ಶೆ ಮಾಡಲು ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶರಣಪ್ಪಗೌಡ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರಮರಾಂಬ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಲಿಂಗಸುಗೂರು, ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ಪಂಚರತ್ನ ಕಾರ್ಯಕರ್ತರ ಸಭೆ ನಡೆಯಲಿದೆ. ಬಿಜೆಪಿಯ ಪ್ರಮುಖ 600 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನರಪರ ಯೋಜನೆಗಳನ್ನು ಜನರಿಗೆ ಮುಟ್ಟಿಸಿ ಪಕ್ಷವನ್ನು ಬೂತ್ ಮಟ್ಟದಿಂದ ಇನ್ನಷ್ಟು ಬಲಪಡಿಸುವುದಕ್ಕಾಗಿ ಗ್ರಾಮ ಸ್ವರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಘಟನೆಗಾಗಿ ಬೂತ್ ಮಟ್ಟದಲ್ಲಿ ಪಕ್ಷದ ಐವರು ಕಾರ್ಯಕರ್ತರನ್ನು ಏಜೆಂಟರನ್ನಾಗಿ ಮಾಡಿ ಪಂಚರತ್ನ ಎಂದು ಕರೆಯಲಾಗುವುದು. ಇದರಿಂದ ಪ್ರತಿಯೊಂದು ಮತದಾರರಿಗೆ ತಲುಪಲು ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿ ಜಿಲ್ಲಾ ಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಳ್ಳಿ, ಪ್ರಧಾನ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ ಇದ್ದರು.